ADVERTISEMENT

ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ: ಎಚ್.ಡಿ. ಕುಮಾರಸ್ವಾಮಿ ನೀಡಿದ ಸಲಹೆಗಳಿವು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 7:07 IST
Last Updated 15 ಮಾರ್ಚ್ 2020, 7:07 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರತ್ಯೇಕ (Quarantine) ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಈ ಕೇಂದ್ರಗಳನ್ನು ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಮತ್ತೊಂದು ಟ್ವೀಟ್‌ನಲ್ಲಿ ಕೊರೊನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದಿದ್ದಾರೆ.

ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನದ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು #CoronaPolitics ಎಂಬ ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.