ADVERTISEMENT

ತುರುವೇಕೆರೆ | ಸಕಾಲಕ್ಕೆ ಚಿಕಿತ್ಸೆ ಸಿಗದೆ ಮಹಿಳೆ ಸಾವು: ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 12 ಮೇ 2023, 12:42 IST
Last Updated 12 ಮೇ 2023, 12:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಗುರುವಾರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

ಪಟ್ಟಣದ ಅಗಸರ ಬೀದಿಯ ನಿರ್ಮಲ (40) ಎಂಬುವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಗುರುವಾರ ರಾತ್ರಿ 11.45ರ ಸಮಯದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ತಕ್ಷಣ ಚಿಕಿತ್ಸೆ ನೀಡುವಂತೆ ರೋಗಿಯ ಕಡೆಯವರು ಕೇಳಿಕೊಂಡಿದ್ದಾರೆ. ಅಲ್ಲಿ ಯಾರೊಬ್ಬರೂ ಸ್ಪಂದಿಸಿಲ್ಲ. ಚಿಕಿತ್ಸೆ ನೀಡಬೇಕಾದ ವೈದ್ಯರೂ ಇರಲಿಲ್ಲ.

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿ ಇರಬೇಕಾಗಿದ್ದ ವೈದ್ಯ ಡಾ.ಮುರಳಿ ಆಸ್ಪತ್ರೆಯಲ್ಲಿ ಇರಲಿಲ್ಲ. ವೈದ್ಯರಿಗಾಗಿ ಹುಡುಕಾಟ ನಡೆಸಿದರೂ ಲಭ್ಯವಾಗಿಲ್ಲ. ಕೊನೆಗೆ ತರಬೇತಿ ವೈದ್ಯರೊಬ್ಬರು (ಹೌಸ್ ಸರ್ಜನ್) ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರೂ ಅಷ್ಟರಲ್ಲಿ ರೋಗಿ ಮೃತಪಟ್ಟರು ಎಂದು ರೋಗಿಯ ಸಂಬಂಧಿಕರು ಆರೋಪಿಸಿದ್ದಾರೆ.

ADVERTISEMENT

ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಪದೇಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹುತೇಕ ವೈದ್ಯರು ಖಾಸಗಿ ಕ್ಲಿನಿಕ್ ಹೊಂದಿದ್ದಾರೆ. ಇಲ್ಲಿಗೆ ಬರುವ ರೋಗಿಗಳನ್ನು ಕ್ಲಿನಿಕ್‌ಗೆ ಬರುವಂತೆ ಒತ್ತಾಯಿಸುತ್ತಾರೆ. ಕ್ಲಿನಿಕ್‌ಗಳಲ್ಲಿ ಹಣ ಕಿತ್ತುಕೊಂಡು ಶೋಷಣೆ ಮಾಡುತ್ತಿದ್ದಾರೆ. ಇಂತಹ ವೈದ್ಯರ ವಿರುದ್ಧವೂ ಕ್ರಮ ಕೈಗೊಂಡು, ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಎಚ್‌.ಡಿ.ರುದ್ರೇಶ್ ಒತ್ತಾಯಿಸಿದ್ದಾರೆ.

ತನಿಖೆಗೆ ಆದೇಶ

ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ, ಚಿಕಿತ್ಸೆ ಸಿಗದೆ ರೋಗಿ ಮೃತಪಟ್ಟಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸಲು ಡಾ.ಪುರುಷೋತ್ತಮ್ ನೇತೃತ್ವದ ತಂಡ ರಚಿಸಲಾಗಿದೆ. ಐದು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ತಕ್ಷಣ ವರದಿ ಸಲ್ಲಿಸುವಂತೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗೂ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್.ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.