ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಯುಜಿಸಿ ಅರ್ಹತೆ ಪಡೆಯಲು ಮೂರು ವರ್ಷಗಳ ಕಾಲಮಿತಿ ನಿಗದಿ ಮಾಡಿ, 2025–26ನೇ ಸಾಲಿಗೆ ಮುಂದುವರಿಸುವ ಕುರಿತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಶನಿವಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಇಲ್ಲವೇ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ತೇರ್ಗಡೆಯಾಗಿರಬೇಕು, ಪಿಎಚ್.ಡಿ ಪಡೆದಿರಬೇಕು ಎಂದು ಕೆಲ ವರ್ಷಗಳ ಹಿಂದೆಯೇ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಯಮ ರೂಪಿಸಿತ್ತು. ಪ್ರಥಮ ದರ್ಜೆ ಕಾಲೇಜುಗಳಲ್ಲೂ ಇಂತಹ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನೇ ನೇಮಿಸಿಕೊಳ್ಳಲು ಸೂಚಿಸಿತ್ತು.
‘ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡಿಮೆ ಗೌರವಧನ ಪಡೆದು ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಯುಜಿಸಿ ಅರ್ಹತೆ ಪಡೆಯದ ಅತಿಥಿ ಉಪನ್ಯಾಸಕರನ್ನು ಮಾನವೀಯ ನೆಲೆಗಟ್ಟಿನಲ್ಲಿ ಮುಂದುವರಿಸುವ ಹಾಗೂ ಹೈಕೋರ್ಟ್ ತೀರ್ಪಿನ ಅನ್ವಯ ಕಾನೂನು ತೊಡಕು ಎದುರಾಗದಂತೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚೆ ನಡೆಸಲಾಗಿದೆ. ಆದರೆ, ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿ, ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.