ಬಿಬಿಎಂಪಿ
ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾಹೀರಾತು ಹಾಗೂ ಫಲಕಗಳನ್ನು ಹಾಕಿದ ಸಾರ್ವಜನಿಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.
‘ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸಬೇಕು‘ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಪ್ರಸಕ್ತ ಸಾಲಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 402 ಜಾಹೀರಾತು ಹೋರ್ಡಿಂಗ್ಸ್ ಪತ್ತೆಯಾಗಿವೆ. ಇವುಗಳಲ್ಲಿ 150 ಅಧಿಕೃತ ಮತ್ತು 251 ಅನಧಿಕೃತ ಇವೆ. 73 ಫಲಕಗಳನ್ನು ಸ್ವಯಂ ತೆರವುಗೊಳಿಸಲಾಗಿದ್ದರೆ 123 ಅನ್ನು ಬಿಬಿಎಂಪಿ ತೆರವುಗೊಳಿಸಿದೆ. 203 ಪ್ರಕರಣಗಳಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ’ ಎಂದು ವಿವರಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.