ಥಾವರಚಂದ ಗೆಹಲೋತ್
ಬೆಂಗಳೂರು: ‘ಕರ್ನಾಟಕದ ಅಭಿವೃದ್ಧಿ ಮಾದರಿಯನ್ನು ವಿಶ್ವವೇ ಕೊಂಡಾಡುತ್ತಿದೆ. ವಿಶ್ವಸಂಸ್ಥೆಯ ಮುಖ್ಯಸ್ಥರೇ ರಾಜ್ಯಕ್ಕೆ ಬಂದು ಸರ್ಕಾರದ ಯೋಜನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೇಳಿದ್ದಾರೆ.
‘ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಮಾದರಿ ಅಭಿವೃದ್ಧಿ ಎಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಡಳಿತ ರೂಪಿಸುವುದು. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವೂ ಇದರಲ್ಲಿ ಸೇರುತ್ತದೆ’ ಎಂದರು.
‘ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಹ್ಯೂಮನ್ ರೈಟ್ಸ್ ಹಬ್‌ನ ಬ್ಲಾಗ್‌ನಲ್ಲಿ ‘ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್‌ನೆಸ್’ ಎಂದು ಮತ್ತು ಎ ಬ್ಲ್ಯೂಪ್ರಿಂಟ್ ಫಾರ್ ದ ವರ್ಲ್ಡ್ ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವಸಂಸ್ಥೆಯ ಮುಖ್ಯಸ್ಥರೇ ರಾಜ್ಯಕ್ಕೆ ಬಂದಿದ್ದರು’ ಎಂದರು.
‘ಗ್ಯಾರಂಟಿ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ ಅವರು ಈ ಯೋಜನೆಗಳಿಗಾಗಿ ವರ್ಷಕ್ಕೆ ₹52 ಸಾವಿರ ಕೋಟಿಗಳಿಗೂ ಹೆಚ್ಚು ಅನುದಾನ ನೀಡಲಾಗುತ್ತಿದೆ. ಇಲ್ಲಿಯವರೆಗೆ ಐದು ಗ್ಯಾರಂಟಿಗಳಿಗಾಗಿ ₹70 ಸಾವಿರ ಕೋಟಿಯನ್ನು ನೇರವಾಗಿ ಜನರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕಲ್ಯಾಣ ಕಾರ್ಯಕ್ರಮಗಳಿಗಾಗಿ ವರ್ಷಕ್ಕೆ ₹90 ಸಾವಿರ ಕೋಟಿಗೂ ಹೆಚ್ಚಿನ ಮೊತ್ತವನ್ನು ಖರ್ಚು ಮಾಡಲಾಗುತ್ತಿದೆ. ಸಾಮಾಜಿಕ ಪಿಂಚಣಿಗಳು, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಆಹಾರ ಮತ್ತು ನಾಗರಿಕ ಸರಬರಾಜು, ಕೈಮಗ್ಗ ಮತ್ತು ಜವಳಿ, ವಸತಿ,ಶಿಕ್ಷಣ, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ಹಿಂದುಳಿದವರು, ಪರಿಶಿಷ್ಟರು, ಅಲ್ಪಸಂಖ್ಯಾತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳು ಸೇರಿ ವಿವಿಧ ಇಲಾಖೆಗಳಿಂದ ನೀಡುವ ನೇರ ಯೋಜನೆಗಳು ಮತ್ತು ಸಬ್ಸಿಡಿ, ಪ್ರೋತ್ಸಾಹ ಧನಗಳಿಂದ 1.25 ಕೋಟಿ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ’ ಎಂದು ರಾಜ್ಯಪಾಲರು ಹೇಳಿದರು.
‘ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದ ಅಸಮಾನತೆಯ ತೀವ್ರತೆ ಕಡಿಮೆಯಾಗಿದೆ. ವಿದೇಶಿ ಹೂಡಿಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಜಿಎಸ್‌ಟಿ ಬೆಳವಣಿಗೆ ದರವೂ ಉತ್ತಮವಾಗಿದೆ. ಹೀಗಾಗಿ ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸಲು ಸಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.
‘ಮೂಲಸೌಕರ್ಯಗಳನ್ನು ಒದಗಿಸುವುದರಲ್ಲೂ ಕರ್ನಾಟಕವು ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ. ರಾಜ್ಯವು ತನ್ನ 2024–25 ರ ಬಜೆಟ್‌ನ ಶೇ 15.01 ರಷ್ಟು ಮೊತ್ತವನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ’ ಎಂದು ಗೆಹಲೋತ್ ವಿವರಿಸಿದರು.
2024–25 ನೇ ಸಾಲಿನಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದರ ಜತೆಗೆ ವಿತ್ತೀಯ ನಿರ್ವಹಣೆಯನ್ನು ಉತ್ತಮವಾಗಿ ನಿಭಾಯಿಸಿದೆ. 2024–25 ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯದ ರಾಜಸ್ವ ಸಂಗ್ರಹಣೆಯು ₹1,81,908 ಕೋಟಿಗೆ ತಲುಪಿದೆ. ಹಿಂದಿನ ಸಾಲಿಗೆ ಹೋಲಿಸಿದರೆ ಡಿಸೆಂಬರ್ ಅಂತ್ಯದವರೆಗೆ ರಾಜಸ್ವ ಸ್ವೀಕೃತಿಯು ಶೇ 13 ರಷ್ಟು ಬೆಳವಣಿಗೆ ಸಾಧಿಸಿದೆ. ರಾಜ್ಯಗಳಿಂದ ಸ್ವೀಕೃತವಾಗುವ ಒಟ್ಟು ಜಿಎಸ್‌ಟಿ ತೆರಿಗೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಡಿಸೆಂಬರ್ ಅಂತ್ಯದವರೆಗೆ ಜಿಎಸ್‌ಟಿ ತೆರಿಗೆಯುವ ಶೇ 12 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಅವರು ಹೇಳಿದರು.
‘ಗ್ಯಾರಂಟಿಗಳಿಗಾಗಿ ವರ್ಷಕ್ಕೆ ₹52 ಸಾವಿರ ಕೋಟಿಗಳಿಗೂ ಹೆಚ್ಚು ಅನುದಾನ ನೀಡಲಾಗುತ್ತಿದೆ. ಇಲ್ಲಿಯವರೆಗೆ ಐದು ಗ್ಯಾರಂಟಿಗಳಿಗಾಗಿ ₹70000 ಕೋಟಿಯನ್ನು ಜನರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ರಾಜ್ಯಪಾಲರು ಹೇಳಿದರು. ಕಲ್ಯಾಣ ಕಾರ್ಯಕ್ರಮಗಳಿಗಾಗಿ ವರ್ಷಕ್ಕೆ ₹90000 ಕೋಟಿಗೂ ಹೆಚ್ಚಿನ ಮೊತ್ತವನ್ನು ಖರ್ಚು ಮಾಡಲಾಗುತ್ತಿದೆ. ಸಾಮಾಜಿಕ ಪಿಂಚಣಿಗಳು ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೈಮಗ್ಗ ಮತ್ತು ಜವಳಿ ವಸತಿ ಶಿಕ್ಷಣ ಕೈಗಾರಿಕೆ ಕೌಶಲ್ಯಾಭಿವೃದ್ಧಿ ಹಿಂದುಳಿದವರು ಪರಿಶಿಷ್ಟರು ಅಲ್ಪಸಂಖ್ಯಾತರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳು ಸೇರಿ ವಿವಿಧ ಇಲಾಖೆಗಳಿಂದ ನೀಡುವ ನೇರ ಯೋಜನೆಗಳು ಮತ್ತು ಸಹಾಯಧನ ಪ್ರೋತ್ಸಾಹ ಧನಗಳಿಂದ 1.25 ಕೋಟಿ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ ಎಂದರು ಅವರು ಹೇಳಿದರು. ಗೃಹ ಜ್ಯೋತಿ ಯೋಜನೆಯಡಿ ಈಗ 1.61 ಕೋಟಿ ಗ್ರಾಹಕರು ಸೌಲಭ್ಯವನ್ನು ಪಡೆಯುತ್ತಿದ್ದಾರೆ. 2023ರ ಆಗಸ್ಟ್ ನಿಂದ 2025ರ ಜನವರಿವರೆಗೆ ಒಟ್ಟು ₹17290 ಕೋಟಿ ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.