ADVERTISEMENT

ವಿ.ವಿ.ಗಳಲ್ಲಿ ಪ್ರವೇಶ ಕುಸಿತ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ; ಡಿಕೆಶಿ

ಹೊಸ :

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2025, 11:21 IST
Last Updated 14 ಫೆಬ್ರುವರಿ 2025, 11:21 IST
<div class="paragraphs"><p>ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್</p></div>

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿಶ್ವವಿದ್ಯಾಲಯಕ್ಕೆ ಕೇವಲ ₹2 ಕೋಟಿ ಮೀಸಲಿಟ್ಟಿದ್ದರು. ಆದರೆ, ಯಾವುದೇ ಜಮೀನು ನೀಡಿರಲಿಲ್ಲ ಎಂದರು.

ಮಂಡ್ಯ, ಚಾಮರಾಜನಗರ ಭಾಗದಲ್ಲಿ ಎಲ್ಲರೂ ಮೈಸೂರು ವಿಶ್ವವಿದ್ಯಾಲಯಕ್ಕೆ ಮೊದಲ ಆದ್ಯತೆ ನೀಡಿದ ಕಾರಣ ಇತರೇ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಕುಸಿತವಾಗಿತ್ತು. ಈ ಬಗ್ಗೆ ಆಂತರಿಕ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಗಳು ನನ್ನ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ರಚಿಸಿದ್ದರು. ಈ ಬಗ್ಗೆ ನಾವು ಚರ್ಚೆ ಮಾಡಿ, ಬಂದಿರುವ ಸಲಹೆಗಳನ್ನು ಪರಾಮರ್ಶಿಸಿದ್ದೇವೆ. ಈ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಲು ಆಗಿಲ್ಲ. ಮಾಹಿತಿ ನೀಡಿದ ನಂತರ ಸಚಿವ ಸಂಪುಟ ಸಭೆಯಲ್ಲಿ ಇಡುತ್ತೇವೆ. ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

ಅಗತ್ಯಬಿದ್ದರೆ ಈ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತೀರಾ ಎಂದು ಕೇಳಿದಾಗ, “ನಿಮ್ಮ ಮಾತಿಗೆ ನಾನು ಕುಣಿಯಲು ಆಗುವುದಿಲ್ಲ. ನಿಮ್ಮ ಪ್ರಯತ್ನದಿಂದ ನನ್ನ ಬಾಯಲ್ಲಿ ಕೆಲವು ವಿಚಾರ ಬರುವುದಿಲ್ಲ. ಬೇರೆಯವರನ್ನು ನಿಭಾಯಿಸುವಂತೆ ನನ್ನನ್ನು ನಿಭಾಯಿಸಲು ಪ್ರಯತ್ನಿಸಬೇಡಿ. ರಾಜ್ಯ, ವಿವಿಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದರು.

ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ. ವಿದ್ಯಾರ್ಥಿಗಳ ಭವಿಷ್ಯವೇ ಮುಖ್ಯ. ಪ್ರಾಧ್ಯಾಪಕರು ಮಂಡ್ಯ, ಚಾಮರಾಜನಗರಕ್ಕೆ ಹೋಗಲು ತಯಾರಿಲ್ಲ. ಅವರು ತಮ್ಮ ಹಿರಿತನ ಹಾಗೂ ಪಿಂಚಣಿ ವ್ಯವಸ್ಥೆ ಗಮನದಲ್ಲಿಟ್ಟಕೊಂಡು ಹಿಂಜರಿಯುತ್ತಿದ್ದಾರೆ. ಈ ವಿಚಾರವಾಗಿ ಬಂದಿರುವ ಸಲಹೆಗಳನ್ನು ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.