ADVERTISEMENT

ಅವೈಜ್ಞಾನಿಕ ಟೋಲ್ ಸಂಗ್ರಹ: ಪರಿಷತ್‌ನಲ್ಲಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 19:31 IST
Last Updated 24 ಮಾರ್ಚ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ವಿಧಾನ ಪರಿಷತ್‌ನಲ್ಲಿ ಪಕ್ಷಾತೀತವಾಗಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಮಹಾಂತೇಶ ಕವಟಗಿಮಠ, ‘ರಸ್ತೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಎಷ್ಟು, ಎಷ್ಟು ವರ್ಷ ಟೋಲ್ ಸಂಗ್ರಹಿಸಲು ಅವಕಾಶ ನೀಡುತ್ತೀರಿ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ‘ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಸಾರ್ವಜನಿಕ –ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುತ್ತದೆ. ರಸ್ತೆ ನಿರ್ಮಿಸಲು ಖಾಸಗಿ ಸಂಸ್ಥೆಗಳು ಬ್ಯಾಂಕ್‍ಗಳಿಂದ ಸಾಲ ಪಡೆದಿರುತ್ತವೆ. ಸಾಲ ಮುಗಿಯುವರೆಗೂ ಶುಲ್ಕ ಸಂಗ್ರಹಿಸಲಾಗುತ್ತದೆ. ಕೆಲವು ರಸ್ತೆಗಳಲ್ಲಿ 10 ವರ್ಷ, 20 , 30 ವರ್ಷಗಳವರೆಗೂ ಶುಲ್ಕ ಸಂಗ್ರಹಿಸಲು ಅನುಮತಿ ನೀಡಲಾಗಿದೆ’ ಎಂದರು.

ಮಧ್ಯಪ್ರವೇಶಿಸಿದ ಕಾಂಗ್ರೆಸ್ಸಿನ ಸಿ.ಎಂ. ಇಬ್ರಾಹಿಂ, ‘ಟೋಲ್ ಸಂಗ್ರಹಿಸಲು ಖಾಸಗಿ ಕಂಪನಿಗಳಿಗೆ ನೀಡುತ್ತಿರುವ ಸಮಯಾವಕಾಶ ಅವೈಜ್ಞಾನಿಕ’ ಎಂದು ತರಾಟೆಗೆ ತೆಗೆದುಕೊಂಡರು.

ADVERTISEMENT

ಕಾಂಗ್ರೆಸ್ಸಿನ ಪ್ರಕಾಶ್ ರಾಥೋಡ್, ಎಂ.ನಾರಾಯಣಸ್ವಾಮಿ, ‘ಈ ರೀತಿ ಟೋಲ್ ಸಂಗ್ರಹದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ’ ಎಂದರು. ಜೆಡಿಎಸ್‌ ಮತ್ತು ಬಿಜೆಪಿಯ ಕೆಲವೂ ಸದಸ್ಯರೂ ಅದಕ್ಕೆ ಧ್ವನಿಗೂಡಿಸಿದರು.

ಫಾಸ್ಟ್ ಟ್ಯಾಗ್ ಅಳವಡಿಕೆ: ‘ರಾಜ್ಯ ಹೆದ್ದಾರಿಗಳಲ್ಲಿ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲು ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದೆ. ಬೆಳಗಾವಿ, ಮುಧೋಳ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕಬ್ಬು ಅರೆಯುವ ಸಂದರ್ಭದಲ್ಲಿ ಸುಮಾರು 4 ತಿಂಗಳು ತೊಂದರೆಯಾಗುತ್ತಿದೆ. ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳು ಟೋಲ್‍ಗಳಲ್ಲಿ ಸಾಲುಗಟ್ಟಿ ನಿಂತಿರುತ್ತವೆ. ಅವುಗಳಿಗೆ ಬೈಪಾಸ್ ರಸ್ತೆ ನಿರ್ಮಿಸಿ, ಅನುಕೂಲ ಮಾಡಿಕೊಡುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಕಾರಜೋಳ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.