ADVERTISEMENT

ಲಕ್ಕುಂಡಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ

​ಪ್ರಜಾವಾಣಿ ವಾರ್ತೆ
Published 22 ಜನವರಿ 2025, 15:25 IST
Last Updated 22 ಜನವರಿ 2025, 15:25 IST
ಲಕ್ಕುಂಡಿ ಸ್ತಬ್ಧಚಿತ್ರದೊಂದಿಗೆ ಹೇಮಂತ್‌ ಎಂ.ನಿಂಬಾಳ್ಕರ್‌ 
ಲಕ್ಕುಂಡಿ ಸ್ತಬ್ಧಚಿತ್ರದೊಂದಿಗೆ ಹೇಮಂತ್‌ ಎಂ.ನಿಂಬಾಳ್ಕರ್‌    

ನವದೆಹಲಿ: ‘ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ 26ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ’ ಎಂದು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ತಿಳಿಸಿದರು. 

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ’ ಎಂದರು. 

‘ಲಕ್ಕುಂಡಿಯು ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ’ ಎಂದರು. 

ADVERTISEMENT

ಲಕ್ಕುಂಡಿಯ ಶಿಲ್ಪಕಲೆಯ ವೈಭವವನ್ನು ಅದರ ಪ್ರತಿರೂಪದಂತೆ ‘ಕೆತ್ತುವ’ ಬೃಹತ್‌ ಸವಾಲು ಎದುರಾಗಿತ್ತು. ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜು, ಹೊಂಜು ಮತ್ತು ಮಳೆ ಎಲ್ಲವೂ ಸವಾಲುಗಳು ಕಂಡಿದ್ದವು.  ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿಬಂದಿದೆ. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ 18 ಕಲಾವಿದರ ತಂಡವನ್ನು ಜಗ್ಗಲಿಗೆ ಕಲಾವಿದ ಲಿಂಗಯ್ಯ ಮುನ್ನಡೆಸುತ್ತಾರೆ. ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ವರು ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.