ಭದ್ರಾ ಮೇಲ್ದಂಡೆ ಯೋಜನೆ
ನವದೆಹಲಿ: ಕೇಂದ್ರ ಪ್ರಾಯೋಜಿತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಅಕ್ಟೋಬರ್ 10ರಂದು ಪ್ರಸ್ತಾವನೆ ಸಲ್ಲಿಸಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ತಿಳಿಸಿದೆ.
ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ‘ವಿಶ್ವೇಶ್ವರಯ್ಯ ಜಲ ನಿಗಮವು ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ’ ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಸರ್ಕಾರ ಹಲವು ವರ್ಷಗಳಿಂದ ಒತ್ತಾಯಿಸುತ್ತಿದೆ.
‘ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಸ್ತುತ ಕೇಂದ್ರ ಸರ್ಕಾರದ ಯಾವುದೇ ಯೋಜನೆಯಡಿ ಸೇರಿಸಿಲ್ಲ. ಹೀಗಾಗಿ, ಯೋಜನೆಗೆ ಅನುದಾನ ಮಂಜೂರು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕೇಂದ್ರ ಜಲಶಕ್ತಿ ಸಚಿವರು ಈ ಹಿಂದೆ ಸ್ಪಷ್ಟಪಡಿಸಿದ್ದರು. ಪ್ರಸ್ತಾವನೆ ಸಲ್ಲಿಸಿದರೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅನುದಾನ ನೀಡುವ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.