ಬೆಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸೀಟುಗಳ ಮೀಸಲಾತಿಯನ್ನು ರಾಜ್ಯ ಸರ್ಕಾರ ನಿರ್ದಿಷ್ಟ ದಿನದಲ್ಲಿ ಪ್ರಕಟಿಸದೇ ಹೋದರೆ ಹಾಲಿ ರೋಸ್ಟರ್ ಪ್ರಕಾರವೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲಾಗುವುದು’ ಎಂದು ಹೈಕೋರ್ಟ್ ಮೌಖಿಕವಾಗಿ ಎಚ್ಚರಿಸಿದೆ.
ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ರಿಟ್ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಸಕಾಲದಲ್ಲಿ ಚುನಾವಣೆ ನಡೆಸದೆ ವಿಳಂಬ ಧೋರಣೆ ಅನುಸರಿಸಿದರೆ ಅದು ಸಾಂವಿಧಾನಿಕ ಆಡಳಿತ ಮುರಿದು ಬಿದ್ದಿರುವುದರ ದ್ಯೋತಕ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.
ಮೀಸಲು ನಿಗದಿಗೆ ಸಮಯಾವಕಾಶ ಕೋರಿದ ಸರ್ಕಾರದ ಪರ ವಕೀಲರ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅವಧಿ ಮುಗಿಯುವುದರೊಳಗೆ ಮೀಸಲಾತಿ ಸೇರಿದಂತೆ ಎಲ್ಲವನ್ನೂ ಪೂರ್ಣಗೊಳಿಸಬೇಕು. ಒಂದು ವೇಳೆ ಮೀಸಲಾತಿ ಅಧಿಸೂಚನೆಯನ್ನು ನಿರ್ದಿಷ್ಟ ದಿನಾಂಕದಲ್ಲಿ ಪ್ರಕಟಿಸಲು ಮುಂದಾಗದೇ ಹೋದರೆ ಹಾಲಿ ಇರುವ ರೋಸ್ಟರ್ ಪ್ರಕಾರವೇ ಚುನಾವಣೆ ನಡೆಸಲು ಆಯೋಗಕ್ಕೆ ನಿರ್ದೇಶಿಸಲಾಗುವುದು’ ಎಂದು ಮೌಖಿಕವಾಗಿ ನುಡಿಯಿತು. ಕೊನೆಯ ಬಾರಿಗೆ 11 ದಿನಗಳ ಕಾಲಾವಕಾಶ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
‘ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲು ನಿರ್ದೇಶಿಸಬೇಕು. ಶಿವಮೊಗ್ಗ, ತುಮಕೂರು, ದಾವಣಗೆರೆ, ಮೈಸೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ, ಅತ್ತಿಬೆಲೆ, ಬೊಮ್ಮಸಂದ್ರ, ಕಮಲಾಪುರ ನಗರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಆಯೋಗ ಕೋರಿದೆ. ರಾಜ್ಯ ಚುನಾವಣಾ ಆಯೋಗದ ಪರ ಪದಾಂಕಿತ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.