ಎನ್. ಚಲುವರಾಯಸ್ವಾಮಿ
ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೋದನೆ ನೀಡಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಂಗಳವಾರ ಇಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಬೆಲೆ ಬೆಂಬಲ ಯೋಜನೆಯಡಿ (ಪಿಎಸ್‌ಎಸ್) ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಳೆಗಳಿಗೆ ನೀಡುತ್ತಿರುವ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಒಪ್ಪಿಗೆ ಕೊಡಬೇಕು ಎಂದು ಅವರು ಕೋರಿದರು.
ರಾಜ್ಯದಲ್ಲಿ ರೈತರು ಯಾಂತ್ರೀಕೃತ ಕೃಷಿ ಪದ್ಧತಿಗಳನ್ನು ಹೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಎಸ್‌ಎಂಎಎಂ ಯೋಜನೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ, 2025-26ನೇ ಸಾಲಿಗೆ ರಾಜ್ಯಕ್ಕೆ ಹೆಚ್ಚುವರಿಯಾಗಿ ₹200 ಕೋಟಿ ಅನುದಾನ ನೀಡಬೇಕು ಎಂದು ಅವರು ಮನವಿ ಮಾಡಿದರು.
ರಸಗೊಬ್ಬರ ಪೂರೈಕೆ: ರಾಜ್ಯಕ್ಕೆ ಏಪ್ರಿಲ್‌ನಿಂದ ಸೆಪ್ಟೆಂಬರ್ ವರೆಗೆ ಹಂಚಿಕೆಯಾಗಿರುವ ಯೂರಿಯಾದ ಪೈಕಿ 3.36 ಲಕ್ಷ ಟನ್ ಇನ್ನೂ ಪೂರೈಕೆ ಆಗಿಲ್ಲ. ಅದನ್ನು ಶೀಘ್ರ ಸರಬರಾಜು ಮಾಡಬೇಕು ಎಂದು ಅವರು ಆಗ್ರಹಿಸಿದರು.
ಕೃಷಿ ವಿಶ್ವವಿದ್ಯಾಲಯಕ್ಕೆ ಮಾನ್ಯತೆ: ಮಂಡ್ಯದಲ್ಲಿ ಹೊಸದಾಗಿ ಪ್ರಾರಂಭವಾಗಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಐಸಿಎಆರ್‌ನಿಂದ ಮಾನ್ಯತೆ ಮತ್ತು ಅಗತ್ಯ ಅನುದಾನ ನೀಡಬೇಕು. ಜತೆಗೆ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ ಕೇಂದ್ರಗಳನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಬೇಕು ಎಂದು ಅವರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.