ADVERTISEMENT

ಕೋಡಿಹಳ್ಳಿ ವಿರುದ್ಧ ಸಿಬಿಐ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 20:16 IST
Last Updated 1 ಜೂನ್ 2022, 20:16 IST

ಬೆಂಗಳೂರು: ‘ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಅರಳಾಪುರ ಮಂಜೇಗೌಡ್ರು ಆಗ್ರಹಿಸಿದರು.

‘ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಹೋರಾಟದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಯಾರು ಹಣ ನೀಡಿದ್ದಾರೆ. ಅದನ್ನು ಪಡೆದವರು ಯಾರು? ಹಣ ಯಾರ ಪಾಲಾಯಿತು ಎನ್ನುವುದು ಬಹಿರಂಗವಾಗಬೇಕಾಗಿದೆ. ರಾಜ್ಯ ರೈತ ಸಂಘದ ಮೇಲಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

’15 ದಿನಗಳ ಒಳಗೆ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರನ್ನು ಬಂಧಿಸಿ ರಾಜ್ಯದಿಂದ ಗಡಿ ಪಾರು ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ರಾಷ್ಟ್ರೀಯ ರೈತ ನಾಯಕರು ಗಾಂಧಿಭವನದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ರೈತ ನಾಯಕ ರಾಕೇಶ್‌ ಟಿಕಾಯತ್‌ ಅವರ ಮೇಲೆ ಹಲ್ಲೆ ಮಾಡಿ ಮಸಿ ಎರಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.