ಬೆಂಗಳೂರು: ‘ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯ (ಜಾತಿವಾರು ಸಮೀಕ್ಷೆ) ಕುರಿತು ಜನರಿಗೆ ಅರಿವು ಮೂಡಿಸಲು 5,950 ಗ್ರಾಮ ಪಂಚಾಯಿತಿಗಳ 92 ಸಾವಿರ ಸದಸ್ಯರನ್ನು ಬಳಸಿಕೊಳ್ಳಬೇಕು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಸಲಹೆ ನೀಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿರುವ ಅವರು, ‘ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಕಾರ್ಯದರ್ಶಿಗಳು ಹಾಗೂ ಪಿಡಿಒಗಳನ್ನು ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಬೇಕು. ವಿಶೇಷ ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ನಡೆಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದಿದ್ದಾರೆ.
‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಂಟು ಹಂತದಲ್ಲಿ ಅಧಿಕಾರಿ ವರ್ಗವಿದೆ. ಅವರನ್ನು ಸಮೀಕ್ಷೆಯ ಯಾವ ಹಂತದಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನಿರ್ಧರಿಸಿ ತೀರ್ಮಾನ ತೆಗೆದುಕೊಳ್ಳಬೇಕು. ತಮ್ಮ ಕರ್ತವ್ಯದ ಭಾಗವಾಗಿ ತಮ್ಮ ವ್ಯಾಪ್ತಿಯ ಸುಮಾರು 200ರಿಂದ 500 ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹೊಣೆಯನ್ನು ಕಾರ್ಯದರ್ಶಿಗಳು, ಪಿಡಿಒಗಳು, ಬಿಲ್ ಕಲೆಕ್ಟರ್‌ಗಳು, ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ನೀಡಬಹುದು. ಮನೆ ಮನೆಗೆ ತೆರಳಿ ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯ ಅರಿವು ಮೂಡಿಸಲು ಜಾಹೀರಾತು ನೀಡುವುದು, ಕರಪತ್ರಗಳನ್ನು ಹಂಚುವುದು, ಧ್ವನಿವರ್ಧಕಗಳ ಮೂಲಕ ಮಾಹಿತಿ ನೀಡಿ ಜನರು ಸ್ವಯಂಪ್ರೇರಿತರಾಗಿ ಭಾಗಿಯಾಗುವಂತೆ ಮಾಡಬೇಕು’ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.