ADVERTISEMENT

ಬಹು ಅಂಗಾಂಗ ವೈಫಲ್ಯ: ಮಾಜಿ ಸಚಿವ ವಿ.ಧನಂಜಯಕುಮಾರ್‌ ನಿಧನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2019, 11:15 IST
Last Updated 4 ಮಾರ್ಚ್ 2019, 11:15 IST
 ವಿ.ಧನಂಜಯಕುಮಾರ್‌
ವಿ.ಧನಂಜಯಕುಮಾರ್‌    

ಮಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಅವರು ನಗರದ ಯೂನಿಟಿ ಆಸ್ಪತ್ರೆಯಲ್ಲಿ ಸೋಮವಾರಮಧ್ಯಾಹ್ನ ನಿಧನ ಹೊಂದಿದ್ದಾರೆ.

67 ವರ್ಷ ವಯಸ್ಸಿನ ಧನಂಜಯಕುಮಾರ್‌ ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಆಸ್ಪತ್ರೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದರು.

ನಾಳೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ನಗರದ ಕದ್ರಿಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ವೇಣೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ADVERTISEMENT

ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯಕುಮಾರ್‌, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಬಿ.ಎಸ್‌.ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪಿಸಿದ್ದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು. ಆ ಬಳಿಕ ಕಾಂಗ್ರೆಸ್‌ ಸೇರಿದ್ದರು.

ಮುಖ್ಯಮಂತ್ರಿ ಸಂತಾಪ
ಬೆಂಗಳೂರು:
ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಸರ್ಕಾರದಲ್ಲಿ ಎರಡು ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರದಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.