ADVERTISEMENT

ವಾಲ್ಮೀಕಿ ನಿಗಮದ ಹಗರಣ: ಬಿಜೆಪಿ ಧರಣಿ ವಾಪಸ್

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 15:50 IST
Last Updated 22 ಜುಲೈ 2024, 15:50 IST
   

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪಟ್ಟುಹಿಡಿದು ಸಭಾಧ್ಯಕ್ಷರ ಪೀಠದ ಎದುರು ನಡೆಸುತ್ತಿದ್ದ ಧರಣಿಯನ್ನು ಬಿಜೆಪಿ– ಜೆಡಿಎಸ್‌ ಸದಸ್ಯರು ಸೋಮವಾರ ವಾಪಸ್ ಪಡೆದರು.

ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ, ಜೆಡಿಎಸ್‌ ಸದಸ್ಯರು ಧರಣಿ ಮುಂದುರಿಸಿದರು. ಆಗ ಸಭಾಧ್ಯಕ್ಷ ಯು.ಟಿ. ಖಾದರ್, ‘ಈ ವಿಚಾರದಲ್ಲಿ ಮುಖ್ಯಮಂತ್ರಿ ಉತ್ತರ ಕೊಟ್ಟಿದ್ದಾರೆ. ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಸಾರ್ವಜನಿಕ ಮಹತ್ವದ ಹಲವು ವಿಚಾರಗಳಿವೆ. ಧರಣಿ ವಾಪಸ್ ಪಡೆದು ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ವಿಚಾರವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದ್ದೇವೆ. ಹಗರಣದ ವಿಚಾರ ಬಿಟ್ಟು ಉಳಿದೆಲ್ಲವುಗಳಿಗೆ ಮುಖ್ಯಮಂತ್ರಿ ಉತ್ತರ ಕೊಟ್ಟಿದ್ದಾರೆ’ ಎಂದರು.

ADVERTISEMENT

ಮಾತು ಮುಂದುವರಿಸಿದ ಅಶೋಕ, ‘ಮಳೆಹಾನಿ ಪೀಡಿತ ಪ್ರದೇಶಗಳಿಗೆ ನಮ್ಮ ಪಕ್ಷದ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ, ನಾನು ಸೇರಿ ಹಲವರು ಭೇಟಿ ನೀಡಿದ್ದೇವೆ. ರಾಜ್ಯದಲ್ಲಿ ಡೆಂಗಿ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಂತೂ ಡೆಂಗಿ ಮರಣ ಮೃದಂಗ ಬಾರಿಸುತ್ತಿದೆ. ಮುಡಾ ಹಗರಣ, ಕೆಲವು ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ಆಗಬೇಕಿದೆ. ಸಭಾಧ್ಯಕ್ಷರ ವಿನಂತಿ ಮೇರೆಗೆ ಧರಣಿಯನ್ನು ವಾಪಸ್ ಪಡೆಯುತ್ತೇವೆ. ಆದರೆ, ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.