
ಬಿ. ನಾಗೇಂದ್ರ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಲ್ಯಾಣ ನಿಧಿ ಹಣ ದುರ್ಬಳಕೆ ಹಗರಣದ ಆರೋಪಿಯಾದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಿಬಿಐ ದೂರಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದರು.
‘ತನಿಖಾಧಿಕಾರಿ ಮುಂದೆ 15 ದಿನಗಳ ಒಳಗಾಗಿ ಹಾಜರಾಗಬೇಕು. ಮೂರು ತಿಂಗಳ ಕಾಲ ಎರಡನೇ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು. ಕೋರ್ಟ್ ಅನುಮತಿ ಇಲ್ಲದೆ ಕೋರ್ಟ್ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗಬಾರದು. ಸಾಕ್ಷಿಗಳ ಮೇಲೆ ಮೇಲೆ ಪ್ರಭಾವ ಬೀರಬಾರದು ಮತ್ತು ಇದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು’ ಎಂಬ ಷರತ್ತುಗಳೊಡನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಲಾಗಿದೆ.
ನಾಗೇಂದ್ರ ಪರ ಹೈಕೋರ್ಟ್ ವಕೀಲ ಗೌತಮ್ ನೆಟ್ಟಾರು ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.