ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಸಿಬಿಐ, ಗುರುವಾರ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿತು.
ಈ ಸಂಬಂಧ ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶದ ಅನುಸಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗಿನ ತನಿಖಾ ಪ್ರಗತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿ, ‘ಈವರೆಗೆ 31 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ತನಿಖೆ ಚುರುಕಿನಿಂದ ನಡೆಯುತ್ತಿದೆ’ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಪಿ.ದಳವಾಯಿ ಹಾಜರಿದ್ದರು.
ಕೋರಿಕೆ: ‘ವಾಲ್ಮೀಕಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ತನಿಖೆಯನ್ನು ಹೈಕೋರ್ಟ್ ನಿಗಾದಲ್ಲಿಯೇ ನಡೆಸಬೇಕು. ಸಿಬಿಐ ಪ್ರತಿ ಹದಿನೈದು ದಿನಗಳಿಗೊಮ್ಮೆ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.