ADVERTISEMENT

ವಾಲ್ಮೀಕಿ ಪ್ರತಿಮೆ: ಸ್ಥಳ ಪರಿಶೀಲನೆಗೆ ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 19:03 IST
Last Updated 10 ಜನವರಿ 2020, 19:03 IST

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಅನುಮತಿ ಪಡೆಯದೇ ಮಹರ್ಷಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಆದೇಶಿಸಿದೆ.

ಈ ಕುರಿತಂತೆ ಕುವೆಂಪು ಒಕ್ಕಲಿಗರ ಸಂಘದ ಅಧ್ಯಕ್ಷ ಆರ್‌.ರಾಮಾಂಜಿನಪ್ಪ ಸೇರಿದಂತೆ 14 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್, ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಮುನೀಂದ್ರ ಸೇರಿದಂತೆ 14 ಜನರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

‘ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸಲಾಗುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಉಪ ವಿಭಾಗಾಧಿಕಾರಿ ಶ್ರೇಣಿಯ ಅಧಿಕಾರಿಯೊಬ್ಬರನ್ನು ಜಿಲ್ಲಾಧಿಕಾರಿ ನೇಮಕ ಮಾಡಬೇಕು. ಆ ಅಧಿಕಾರಿ ಸ್ಥಳ ಪರಿಶೀಲನೆ ನಡೆಸಬೇಕು. ಒಂದೊಮ್ಮೆ ಕಾನೂನು ಉಲ್ಲಂಘಿಸಿ ಪ್ರತಿಮೆ ಸ್ಥಾಪನೆ ಮಾಡುತ್ತಿದ್ದರೆ, ಸೂಕ್ತ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ವಿಚಾರಣೆಯನ್ನು ಫೆಬ್ರುವರಿ 24ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ವಕೀಲ ಜಿ.ನರಸೀರೆಡ್ಡಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.