ADVERTISEMENT

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ವಾಹನ ಸಂಚಾರ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 14:18 IST
Last Updated 18 ಮಾರ್ಚ್ 2021, 14:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇರಿದಂತೆ ಕೆಲ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಬುಧವಾರ ಹೊರಡಿಸಿದ್ದ ಆದೇಶಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ತಡೆ ನೀಡಿದ್ದಾರೆ. ಅಪೂರ್ಣ ಕಾಮಗಾರಿ ಕಾರಣದಿಂದ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೋರಿಕೆ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಕ್ರಿಟ್ ಕಾಮಗಾರಿ ಮುಕ್ತಾಯಗೊಂಡಿದ್ದರಿಂದ ಮಾ.16ರಿಂದ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ಅನುಮತಿ ನೀಡಿತ್ತು.

ಆದರೆ ಘಾಟಿ ಪ್ರದೇಶದ ದಕ್ಷಿಣ ಕನ್ನಡ ಭಾಗದಲ್ಲಿ ಕಾಂಕ್ರೀಟ್‌ ಕಾಮಗಾರಿ ಇನ್ನೂ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ರಸ್ತೆ ಮುಕ್ತಗೊಳಿಸಿದ್ದರಿಂದ ಕಾಮಗಾರಿಗೆ ತೊಡಕಾಗಿತ್ತು. ಇನ್ನೂ 15 ದಿನಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೋರಿತ್ತು.

ADVERTISEMENT

ಬಾಕಿ ಕಾಮಗಾರಿ ಪೂರ್ಣಗೊಳಿಸಲು ಮಾ.16ರ ಆದೇಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಹಿಂಪಡೆದಿದೆ. ಗುರುವಾರದಿಂದಲೇ ಜಾರಿಗೆ ಬರುವಂತೆ ಅನಿರ್ದಿಷ್ಟ ಕಾಲ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.