ADVERTISEMENT

ವಿಶ್ವಾಸಮತ ಯಾಚನೆ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 3:55 IST
Last Updated 18 ಜುಲೈ 2019, 3:55 IST
   

ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ವಿಶ್ವಾಸಮತ ಯಾಚಿಸಲಿರುವ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ವಿಧಾನಸೌಧ ಎಲ್ಲ ದ್ವಾರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎರಡು ಕಿ.ಮೀ ಪರಿಧಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಂದೋಬಸ್ತ್ ಗಾಗಿ 1,000 ಪೊಲೀಸರನ್ನು ನಿಯೋಜಿಸಲಾಗಿದೆ.

ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ.

ADVERTISEMENT

ನಗರ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರೇ ಭದ್ರತಾ ವ್ಯವಸ್ಥೆಯ ಮೇಲೆ ನಿಗಾ ವಹಿಸಿದ್ದಾರೆ. ಒಬ್ಬ ಹೆಚ್ಚುವರಿ ಪೊಲೀಸ್ ಕಮಿಷನರ್, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್ ಪಿ ತುಕಡಿ, 21 ಸಿಎಆರ್ ತುಕಡಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸಲು ಸ್ಥಳಕ್ಕೆ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ವಾಟರ್ ಜೆಟ್ ತಂಡವನ್ನೂ ಕರೆಸಿಕೊಳ್ಳಲಾಗಿದೆ.

ವಿಧಾನಸೌಧದ ಗೇಟ್ ನಂ.1ರಲ್ಲಿ ವಿಐಪಿಗಳು ಹಾಗೂ ವಿಧಾನಸೌಧ ಸಿಬ್ಬಂದಿಗೆ, ಗೇಟ್ ನಂ.2 ರಲ್ಲಿ ಪತ್ರಕರ್ತರಿಗೆ ಪ್ರವೇಶ ಅನುಮತಿ ನೀಡಲಾಗಿದೆ ಉಳಿದಂತೆ, ವಿಧಾನಸೌಧದ ಒಳಗೆ ಸಚಿವರು, ಶಾಸಕರು ಮತ್ತು ಅವರ ಆಪ್ತ ಕಾರ್ಯದರ್ಶಿಗಳಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.

ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಪ್ರತಿಭಟನೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.