ADVERTISEMENT

ಮದ್ದೂರು ಪ್ರಕರಣ | ಹಿಂದೂ ಕಾರ್ಯಕರ್ತರನ್ನು ಸದೆಬಡಿಯುವ ಹುನ್ನಾರ: ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಸೆಪ್ಟೆಂಬರ್ 2025, 11:11 IST
Last Updated 8 ಸೆಪ್ಟೆಂಬರ್ 2025, 11:11 IST
<div class="paragraphs"><p>ವಿಜಯೇಂದ್ರ</p></div>

ವಿಜಯೇಂದ್ರ

   

(ಸಂಗ್ರಹ ಚಿತ್ರ)

ಬೆಂಗಳೂರು: ‘ಹಿಂದೂ ಸಮಾಜದ ಹಿರಿಯರನ್ನು ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ‘ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಪೊಲೀಸ್ ಲಾಠಿಚಾರ್ಜ್ ಹಾಗೂ ಬಲವಂತದ ಪ್ರಯೋಗದಿಂದ ಜನಾಕ್ರೋಶವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಯತ್ನಿಸುತ್ತಿದೆ. ಹಿಂದೂ ಕಾರ್ಯಕರ್ತರನ್ನು ಸದೆಬಡಿಯುವ ಹುನ್ನಾರ ಸರ್ಕಾರದ ಈ ನಡವಳಿಕೆಯಿಂದ ಸ್ಪಷ್ಟವಾಗುತ್ತಿದೆ‘ ಎಂದು ಆಪಾದಿಸಿದ್ದಾರೆ.

‘ಗೃಹ ಸಚಿವರು ಈ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಹಬದಿಗೆ ತರಲು ಹಾಗೂ ಗಣಪತಿ ಉತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡು ಮದ್ದೂರಿನಲ್ಲಿ ಶಾಂತಿ ನೆಲೆಸಲು ಜರೂರು ಆದ್ಯತೆ ನೀಡಲಿ‘ ಎಂದೂ ಅವರು ಒತ್ತಾಯಿಸಿದ್ದಾರೆ.

'ಮೊಘಲ್ ಪ್ರೇರಣೆಯ' ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ

ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಿ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುವ ಘಟನೆಗಳು ಮಂಡ್ಯ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗಿವೆ.

ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ 'ಮೊಘಲ್ ಪ್ರೇರಣೆಯ' ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಸರ್ಕಾರದ ಈ ಪಕ್ಷಪಾತ ಹಾಗೂ ಮೃದು ಧೋರಣೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲು ಕಾರಣವಾಗುತ್ತಿದೆ. ಸರ್ಕಾರ ಮತಾಂಧರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.