ADVERTISEMENT

ಯೋಗೀಶ್‌ಗೌಡ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ ಕುಲಕರ್ಣಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 6:20 IST
Last Updated 12 ಡಿಸೆಂಬರ್ 2025, 6:20 IST
ಶಾಸಕ ವಿನಯ ಕುಲಕರ್ಣಿ
ಶಾಸಕ ವಿನಯ ಕುಲಕರ್ಣಿ   

ಬೆಂಗಳೂರು: ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್‌, ‘ಪ್ರಕರಣದ ಬಹುತೇಕ ಪ್ರತ್ಯಕ್ಷದರ್ಶಿಗಳು ಪ್ರತಿಕೂಲ ಸಾಕ್ಷ್ಯ ನುಡಿದ್ದಾರೆ. ಹೀಗಾಗಿ, ಅರ್ಜಿದಾರರನ್ನು ಬಂಧನದಲ್ಲಿ ಇರಿಸಿಕೊಂಡು ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ತುರ್ತಾಗಿ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು.

ADVERTISEMENT

ಇದಕ್ಕೆ ಸಿಬಿಐ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿತು.

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ ಕುಲಕರ್ಣಿ ಅವರು 2025ರ ಜೂನ್‌ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.