ADVERTISEMENT

ಅಭಿಮಾನ್ ಸ್ಟುಡಿಯೊ ಆವರಣದಲ್ಲಿ ವಿಷ್ಣು ಜನ್ಮದಿನಾಚರಣೆ: ಮನವಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 18:43 IST
Last Updated 16 ಸೆಪ್ಟೆಂಬರ್ 2025, 18:43 IST
ವಿಷ್ಣುವರ್ಧನ್
ವಿಷ್ಣುವರ್ಧನ್   

ಬೆಂಗಳೂರು: ‘ಅಭಿಮಾನ್ ಸ್ಟುಡಿಯೊ ಆವರಣದಲ್ಲಿ ಇದೇ 18ರಂದು ಇಡೀ ದಿನ ದಿವಂಗತ ನಟ ವಿಷ್ಣುವರ್ಧನ್ ಅವರ 75ನೇ ಜನ್ಮದಿನ ಆಚರಣೆ ನಿಮಿತ್ತ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು’ ಎಂಬ ಅರ್ಜಿದಾರರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಈ ಸಂಬಂಧ ವಿಎಸ್ಎಸ್ ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ ಹಾಗೂ ವಿಎಸ್ಎಸ್‌ ವಿಷ್ಣು ಸೇನಾ ಸಂಘಟನೆ ಅಧ್ಯಕ್ಷ ತಿಮ್ಮರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮನವಿಯನ್ನು ತಿರಸ್ಕರಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಕೆ.ಎಸ್.ಅರುಣ್ ಅವರ ವಾದ ಆಲಿಸಿದ ನ್ಯಾಯಪೀಠ, ‘ಅಭಿಮಾನ್ ಸ್ಟುಡಿಯೊ ಹಾಗೂ ರಾಜ್ಯ ಸರ್ಕಾರದ ನಡುವಿನ ಮಾಲೀಕತ್ವದ ವ್ಯಾಜ್ಯದಲ್ಲಿ ವಿಶೇಷ ಜಿಲ್ಲಾಧಿಕಾರಿಗೆ ಹಲವು ನಿರ್ದೇಶನಗಳನ್ನು ನೀಡಿ 2025ರ ಜನವರಿ 13ರಂದು ನ್ಯಾಯಾಲಯ ಈಗಾಗಲೇ ಆದೇಶ ಹೊರಡಿಸಿದೆ. ಹಾಗಾಗಿ, ಪುನಃ ಬೇರೆ ರೀತಿಯ ಆದೇಶ ನೀಡಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿ ಮಧ್ಯಂತರ ಮನವಿಯನ್ನು ತಿರಸ್ಕರಿಸಿದೆ.

ADVERTISEMENT

ಅರ್ಜಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಜಿಲ್ಲಾಧಿಕಾರಿ, ಬೆಂಗಳೂರು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ, ಅಭಿಮಾನ್ ಸ್ಟುಡಿಯೊದ ಬಿ.ಎಸ್.ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.