ADVERTISEMENT

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ವರದಿಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 13:33 IST
Last Updated 3 ಡಿಸೆಂಬರ್ 2020, 13:33 IST

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ನೀರಾವರಿ ಯೋಜನೆ ಎಂದು ಘೋಷಿಸಲು ಪೂರಕವಾಗಿ ಜಲ ಸಂಪನ್ಮೂಲ ಇಲಾಖೆ ಸಿದ್ಧಪಡಿಸಿರುವ ವರದಿಗೆ ವಿಶ್ವೇಶ್ವರಯ್ಯ ಜಲನಿಗಮದ ಆಡಳಿತ ಮಂಡಳಿ ಸಭೆ ಬುಧವಾರ ಅನುಮೋದನೆ ನೀಡಿದೆ.

ರಾಷ್ಟ್ರೀಯ ನೀರಾವರಿ ಯೋಜನೆ ಎಂದು ಘೋಷಿಸಿದರೆ ಈ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ದೊಡ್ಡ ಮೊತ್ತದ ಅನುದಾನ ಒದಗಿಸುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಕೊಂಡಿತ್ತು. ಅದಕ್ಕೆ ಸಂಬಂಧಿಸಿದ ಎಲ್ಲ ಷರತ್ತುಗಳನ್ನು ಪೂರೈಸಿರುವುದಾಗಿ ವರದಿ ಸಲ್ಲಿಸುವಂತೆ ಕೇಂದ್ರ ಜಲ ಶಕ್ತಿ ಸಚಿವಾಲಯ ರಾಜ್ಯದ ಜಲ ಸಂಪನ್ಮೂಲ ಇಲಾಖೆಗೆ ಸೂಚಿಸಿತ್ತು.

ಜಲ ಸಂಪನ್ಮೂಲ ಇಲಾಖೆಯು ಸಿದ್ಧಪಡಿಸಿರುವ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಿಶ್ವೇಶ್ವರಯ್ಯ ಜಲ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಮಂಡಿಸಲಾಯಿತು. ಮಂಡಳಿಯು ವರದಿಗೆ ಅನುಮೋದನೆ ನೀಡಿದೆ. ವರದಿ ಮತ್ತು ನಿರ್ಣಯದ ಪ್ರತಿಯನ್ನು ಶೀಘ್ರದಲ್ಲಿ ಕೇಂದ್ರ ಜಲ ಶಕ್ತಿ ಸಚಿವಾಲಯಕ್ಕೆ ಕಳುಹಿಸಲಾಗುವುದು. ಆ ಬಳಿಕ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.