ADVERTISEMENT

ವಿಸ್ಟಾಡೋಮ್‌ ಬೋಗಿ: ಜು.11ರಿಂದ ಪಶ್ಚಿಮ ಘಟ್ಟದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 16:53 IST
Last Updated 10 ಜುಲೈ 2021, 16:53 IST
   

ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲ ಇರುವ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ವಿಸ್ಟಾಡೋಮ್ ಬೋಗಿಗಳನ್ನು ಪರಿಚಯಿಸಲಾಗುತ್ತಿದೆ. ಗಣ್ಯರು ಮಂಗಳೂರು ಜಂಕ್ಷನ್‌- ಯಶವಂತಪುರ (ರೈ.ಸಂ.06540/06539) ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ADVERTISEMENT

ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಳೆಗಾಲದ ಸಂದರ್ಭದಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್‌ಪಿನಲ್ಲಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ / ತಂತ್ರಜ್ಞಾನ) ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದೆ.

ಬೋಗಿಯಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್‌ಗಳಿವೆ. ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.