ನವದೆಹಲಿ: ಭದ್ರಾವತಿಯ ಸರ್. ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿಯು (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಶುಕ್ರವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.
‘ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಡಿಸೆಂಬರ್‌ನಲ್ಲಿ ಅಡಿಗಲ್ಲು ಹಾಕಲಿದ್ದಾರೆ’ ಎಂದರು.
‘ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8,000 ಕೋಟಿಯಿಂದ ₹10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ₹1 ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು’ ಎಂದು ಸಚಿವರು ಹೇಳಿದರು.
‘ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.
ವಿಐಎಸ್‌ಎಲ್ ಖಾಸಗೀಕರಣ ಮಾಡಲು ಕೇಂದ್ರ ಸಚಿವ ಸಂಪುಟವು 2016ರಲ್ಲಿ ಒಪ್ಪಿಗೆ ನೀಡಿತ್ತು. ಸಂಸ್ಥೆಯನ್ನು ಸಂಪೂರ್ಣವಾಗಿ ಮಾರಾಟ ಮಾಡಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು (ಡಿಐಪಿಎಎಂ) ಈ ಹಿಂದೆ ಬಿಡ್ ಕರೆದಿತ್ತು. ಬಿಡ್‌ದಾರರು ಆಸಕ್ತಿ ವಹಿಸದ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2022ರ ನವೆಂಬರ್‌ನಲ್ಲಿ ಕೈ ಬಿಟ್ಟಿತ್ತು. ನಂತರ ಸರ್ಕಾರವು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಆರಂಭಿಸಿತ್ತು. ಸಂಸ್ಥೆಯ ಪುನರುಜ್ಜೀವನದ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಈ ಹಿಂದೆ ನಿರ್ದೇಶನ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.