ADVERTISEMENT

ವಿ.ಕೆ.ಶಶಿಕಲಾಗೆ ಕೋವಿಡ್‌ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 16:52 IST
Last Updated 21 ಜನವರಿ 2021, 16:52 IST
ವಿ.ಕೆ. ಶಶಿಕಲಾ ನಟರಾಜನ್‌
ವಿ.ಕೆ. ಶಶಿಕಲಾ ನಟರಾಜನ್‌   

ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಗುರುವಾರ ಸ್ಥಳಾಂತರವಾಗಿದ್ದ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಪ್ರಮುಖರಾದ ವಿ.ಕೆ. ಶಶಿಕಲಾ ನಟರಾಜನ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಕ್ರಮ ಹಣಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಇಲ್ಲಿನ ‍ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಅವರು ಇದೇ ತಿಂಗಳು 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಬುಧವಾರ ಸಂಜೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೋವಿಡ್‌ ಪರೀಕ್ಷೆಗೆ ಅವರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರಿಗೆ ಸೋಂಕು ತಗುಲಲಿಲ್ಲ ಎನ್ನುವುದು ಮೊದಲ ‍ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರಿಗೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶದಲ್ಲಿ ಸೋಂಕು ಇರುವುದು ಕಾಣಿಸಿಕೊಂಡಿತ್ತು. ಅಲ್ಲಿ ಅವರಿಗೆ ನಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಅಧೀಕ್ಷಕ ಡಾ. ರಮೇಶ್ ಕೃಷ್ಣನ್, ‘ಅಧಿಕ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶಶಿಕಲಾ ಎದುರಿಸುತ್ತಿದ್ದಾರೆ. ಅವರಿಗೆ ಕೆಲ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗಿದ್ದು, ಸಿಟಿ ಸ್ಕ್ಯಾನ್ ವರದಿಯಲ್ಲಿ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿರುವುದು ಕಂಡು ಬಂದಿದೆ. ಅವರು ಕೋವಿಡ್‌ ಪೀಡಿತರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.