ADVERTISEMENT

ತಿಂಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಗಿತ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 21:36 IST
Last Updated 19 ಫೆಬ್ರುವರಿ 2020, 21:36 IST
   

ಬೆಂಗಳೂರು: ನಗರದ ಮಹಾಲಕ್ಷ್ಮೀಪುರದ 2ನೇ ಹಂತದ ವಸತಿ ಪ್ರದೇಶದಲ್ಲಿ ಆರಂಭಿಸಿರುವ ತಾಜ್ಯ ವಿಂಗಡಣೆ ಮತ್ತು ವಿಲೇವಾರಿ ಘಟಕವನ್ನು ಒಂದು ತಿಂಗಳಲ್ಲಿ ಸ್ಥಗಿತಗೊಳಿಸಬೇಕೆಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ತ್ಯಾಜ್ಯ ಘಟಕವನ್ನು ಸ್ಥಳಾಂತರಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಹಾಲಕ್ಷ್ಮಿಪುರ 2ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು, ಈ ಘಟಕ ಆರಂಭಿಸಲು ಬಿಬಿಎಂಪಿಯು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ. ಘಟಕವು ವಸತಿ ಪ್ರದೇಶದ 100 ಮೀಟರ್ ಒಳಗೆ ಇದೆ ಎಂದು ತಿಳಿಸಿದರು.

ADVERTISEMENT

ಅದನ್ನು ಪರಿಗಣಿಸಿದ ನ್ಯಾಯಪೀಠ, ಘಟಕ ಆರಂಭಿಸಲು ಮಂಡಳಿಯಿಂದ ಪೂರ್ವಾನುಮತಿ ಪಡೆದಿಲ್ಲ. ಇದು ಕಾನೂನು ಬಾಹಿರ ನಡೆಯಾಗಿದೆ. ಆದ್ದರಿಂದ ಒಂದು ತಿಂಗಳಲ್ಲಿ ಘಟಕದ ಎಲ್ಲಾ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಬೇಕು. ನಂತರ ಘಟಕವನ್ನು ಮುಂದುವರಿಸಬೇಕೆಂದು ಉದ್ದೇಶಿಸಿದರೆ, ಅದಕ್ಕಾಗಿ ಅನುಮತಿ ಕೋರಿ ಮಂಡಳಿಗೆ ಕಾನೂನು ಪ್ರಕಾರ ಸೂಕ್ತ ಅರ್ಜಿ ಸಲ್ಲಿಸಬೇಕು. ಒಂದೊಮ್ಮೆ ಘಟಕದ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸದಿದ್ದರೆ, ಅದರ ಜಾಗವನ್ನು ಆಟದ ಮೈದಾನವಾಗಿ ಪರಿವರ್ತಿಸಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಬಿಬಿಎಂಪಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.