SS ಮಲ್ಲಿಕಾರ್ಜುನ್
ದಾವಣಗೆರೆ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ಪರವಾಗಿ ನಾವಿದ್ದೇವೆ. ಈ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೆಟ್ಟಿಲೇರಲು ಅವಕಾಶವಿದೆ. ಕಾನೂನು ಹೋರಾಟವನ್ನು ಮುಂದುವರಿಸಲಾಗುವುದು’ ಎಂದು ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಂಡು ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಸ್ವಚ್ಛ, ಪ್ರಾಮಾಣಿಕ ಆಡಳಿತ ನಡೆಸುತ್ತಿರುವವರಿಗೆ ಕಿರುಕುಳ ನೀಡಲಾಗುತ್ತಿದೆ. ರಾಜ್ಯಪಾಲರು ಪಕ್ಷಾತೀತವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರ ವಿರುದ್ಧ ತನಿಖೆಗೆ ಅನುಮತಿ ನೀಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಬಿಜೆಪಿ ಕಚೇರಿಯಾದ ರಾಜಭವನ’
ರಾಜಭವನವು ಬಿಜೆಪಿ ಕಚೇರಿಯಾಗಿ ಪರಿವರ್ತನೆಯಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ–ಜೆಡಿಎಸ್ ನಾಯಕರ ಈ ಷಡ್ಯಂತ್ರ ಫಲ ನೀಡದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಕಿಡಿಕಾರಿದರು.
‘ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅನಗತ್ಯ ಸೂಚನೆಗಳನ್ನು ನೀಡುತ್ತಿರಲಿಲ್ಲ. ಸಿದ್ದರಾಮಯ್ಯ ಅವರ ಪತ್ನಿ ಕೂಡ ಹಸ್ತಕ್ಷೇಪ ಮಾಡಿಲ್ಲ. ಅವರ ರಾಜಕೀಯ ಜೀವನಕ್ಕೆ ಕೆಸರೆರಚುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ’ ಎಂದು ಹೇಳಿದರು.
----
‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆ ನಡೆದಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಂದರ್ಭ ಒದಗಿ ಬಂದಾಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ.
-ಬಸವರಾಜು ಶಿವಗಂಗಾ, ಚನ್ನಗಿರಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.