ADVERTISEMENT

3 ಸಾವಿರ ವೈದ್ಯರ ನೇಮಕ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 3:22 IST
Last Updated 17 ಆಗಸ್ಟ್ 2021, 3:22 IST
ಡಾ.ಸಿ.ಎನ್.ಅಶ್ವತ್ಥನಾರಾಯಣ
ಡಾ.ಸಿ.ಎನ್.ಅಶ್ವತ್ಥನಾರಾಯಣ   

ಬೆಂಗಳೂರು: ‘ಕೋವಿಡ್‌ ಮೂರನೇ ಅಲೆ ಹಾಗೂ ಭವಿಷ್ಯದಲ್ಲಿ ಎದುರಾಗಬಹುದಾದ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು ನಾವು ಸಶಕ್ತರಾಗಿದ್ದೇವೆ. ಈ ದಿಶೆಯಲ್ಲಿ 3 ಸಾವಿರ ವೈದ್ಯರು, ತಲಾ 7 ಸಾವಿರ ಶುಶ್ರೂಷಕಿಯರು ಹಾಗೂ ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ಸೋಮವಾರ ನಡೆದ ‘ನಿಮ್ಮ ಸ್ಪಂದನೆ, ನಮ್ಮ ವಂದನೆʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘3 ಸಾವಿರ ವೈದ್ಯರ ಪೈಕಿ 2 ಸಾವಿರ ಮಂದಿ ತಜ್ಞರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದರು.

ADVERTISEMENT

‘ಕೊರೊನಾ ಸೋಂಕಿತರಿಗೆ ಪ್ರತ್ಯೇಕ ಐಸಿಯು ಹಾಗೂ ಮಕ್ಕಳಿಗಾಗಿಯೇ ಪ್ರತ್ಯೇಕ ವಿಭಾಗ ಸ್ಥಾಪಿಸಲಾಗುತ್ತಿದೆ. ಆಮ್ಲಜನಕ ಸೌಲಭ್ಯ, ವೆಂಟಿಲೇಟರ್ ಒದಗಿಸುವ ಜೊತೆಗೆ ಸಿಬ್ಬಂದಿಯನ್ನೂ ನೇಮಿಸಲಾಗುತ್ತಿದೆ. ಸರ್ಕಾರಿ ಮತ್ತು ಖಾಸಗಿ ವೈದ್ಯ ಕಾಲೇಜುಗಳಲ್ಲಿ 50 ಸಾವಿರ ಕೆಎಲ್ ಸಾಮರ್ಥ್ಯದ ಆಮ್ಲಜನಕ ಸಂಗ್ರಹಕ್ಕೆ ಅಗತ್ಯವಿರುವ ಸೌಕರ್ಯ ಕಲ್ಪಿಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ 20 ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ 6 ರಿಂದ 7 ಸಾವಿರ ಕೆಎಲ್ ಆಮ್ಲಜನಕ ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ಗಳನ್ನು ಅಳವಡಿಸಲಾಗುತ್ತಿದೆ’ ಎಂದು ತಿಳಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಅಭಿಮಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಟಿ.ವೆಂಕಟೇಶ್, ಶಾಸಕ ಎನ್.ಎ.ಹ್ಯಾರಿಸ್‌, ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ಡಾ.ಸಿ.ಎನ್.ಮಂಜುನಾಥ್, ಡಾ.ಪ್ರಸನ್ನ, ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಬಿ.ಆರ್‌.ರವಿಕಾಂತೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.