ADVERTISEMENT

ಔರಾದಕರ್ ವರದಿ ಪುನರ್‌ ಪರಿಶೀಲನೆ: ಗೃಹ ಸಚಿವ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2023, 9:33 IST
Last Updated 3 ನವೆಂಬರ್ 2023, 9:33 IST
<div class="paragraphs"><p> ಗೃಹ ಸಚಿವ ಜಿ. ಪರಮೇಶ್ವರ </p></div>

ಗೃಹ ಸಚಿವ ಜಿ. ಪರಮೇಶ್ವರ

   

ತುಮಕೂರು: ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಯ ವೇತನ ಪರಿಷ್ಕರಣೆ ಸಂಬಂಧ ಔರಾದಕರ್ ಸಮಿತಿ ನೀಡಿರುವ ವರದಿಯನ್ನು ಪುನರ್ ಪರಿಶೀಲನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಭರವಸೆ ನೀಡಿದರು.

ನಗರದಲ್ಲಿ ಶುಕ್ರವಾರ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

ಪೊಲೀಸರಿಗೆ ಸರಿಯಾಗಿ ಸಂಬಳ ಆಗುತ್ತಿಲ್ಲ ಎನ್ನುವುದು ವಾಸ್ತವದಿಂದ ಕೂಡಿದೆ. ಔರಾದಕರ್ ವರದಿಯ ಕೆಲವು ಅಂಶಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ವರದಿ ಜಾರಿಯಾಗಿಲ್ಲ. ವರದಿಯ ಪುನರ್ ಪರಿಶೀಲನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗಿದೆ. ವರದಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲು ಹೆಚ್ಚುವರಿಯಾಗಿ ₹600 ಕೋಟಿ ಬೇಕಾಗಬಹುದು ಎಂದರು.

ಪ್ರತಿ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಒಬ್ಬರು ಅಪರಾಧ ಪ್ರಕರಣಗಳನ್ನು ನೋಡಿಕೊಂಡರೆ, ಮತ್ತೊಬ್ಬರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮುಂದಿನ 2 ವರ್ಷಗಳಲ್ಲಿ ಭರ್ತಿ ಮಾಡಲಾಗುವುದು. ಈಗಾಗಲೇ ರಾಜ್ಯದಲ್ಲಿ ಶೇ 40ರಷ್ಟು ಪೊಲೀಸರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ 5 ವರ್ಷದಲ್ಲಿ ಶೇ 70ರಷ್ಟು ಪೊಲೀಸರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು.

ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಇನ್ನೂ ಬಗೆಹರಿದಿಲ್ಲ. 545 ಪಿಎಸ್‌ಐ ಹುದ್ದೆಗಳ ಆಯ್ಕೆ ಪ್ರಕ್ರಿಯೆ ಅರ್ಧಕ್ಕೆ ನಿಂತಿದೆ. ಇದರಿಂದಾಗಿ 1 ಸಾವಿರಕ್ಕೂ ಹೆಚ್ಚು ಪಿಎಸ್‌ಐ ಹುದ್ದೆಗಳು ಖಾಲಿ ಉಳಿದಂತಾಗಿದೆ. ಪೊಲೀಸ್‌ ಸಿಬ್ಬಂದಿಯ ಕೊರತೆ ಸರಿದೂಗಿಸಿಕೊಂಡು ಹೋಗಲು ಸಬ್‌ ಇನ್‌ಸ್ಪೆಕ್ಟರ್‌ಗಳಿಗೆ ಇನ್‌ಸ್ಪೆಕ್ಟರ್‌ ಹುದ್ದೆಗೆ ಬಡ್ತಿ ನೀಡಲಾಗುತ್ತಿದೆ ಎಂದರು.

ಬಿಟ್‌ ಕಾಯಿನ್ ಪ್ರಕರಣವನ್ನು ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ. ಕಳೆದ 6 ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 57 ಕೊಲೆಗಳಾಗಿವೆ. ಎಲ್ಲ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ. ಪೊಲೀಸರು ತಂತ್ರಜ್ಞಾನ ಬಳಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.