ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿ ಹೆಚ್ಚಾಗುತ್ತಿದ್ದು, ಸೋಮವಾರದಿಂದ ಮುಂದಿನ ಮೂರು ದಿನಗಳು ಕನಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಸಂಜೆ 5.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 26.6 ಡಿಗ್ರಿ ಸೆಲ್ಸಿಯಸ್ ವರದಿಯಾದರೆ, ಕನಿಷ್ಠ ಉಷ್ಣಾಂಶ 16.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕನಿಷ್ಠ ಉಷ್ಣಾಂಶ ಇನ್ನಷ್ಟು ಕಡಿಮೆಯಾಗಿದ್ದು, 15.4 ಡಿಗ್ರಿ ಸೆಲ್ಸಿಯಸ್‌ನಷ್ಟು ವರದಿಯಾಗಿದೆ. ಇದರಿಂದಾಗಿ ಬೆಳಿಗ್ಗೆ ಅವಧಿಯಲ್ಲಿ ಚಳಿ ಹೆಚ್ಚಾಗಿತ್ತು.
ಉತ್ತರ ಒಳನಾಡಿನಲ್ಲಿ ಗದಗದಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 6.5 ಡಿಗ್ರಿ ಸೆಲ್ಸಿಯಸ್ (27.5 ಡಿಗ್ರಿ ಸೆಲ್ಸಿಯಸ್) ಕಡಿಮೆ ವರದಿಯಾದರೆ, ಕೊಪ್ಪಳದಲ್ಲಿ 5.3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕುಸಿತವಾಗಿದೆ. ಇದೇ ರೀತಿ ಉತ್ತರ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವೂ ಕುಸಿತ ಕಂಡಿದೆ.
ಮಂಗಳವಾರದಿಂದ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.