ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 15 ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಿದೆ.
ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳು ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಂಭವವಿದೆ. ಇದರಿಂದ ಹಲವೆಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕೆಲ ಜಿಲ್ಲೆಗಳಲ್ಲಿ ಮಳೆಯ ಜತೆಗೆ ಬಿಸಿಗಾಳಿಯೂ ಕಾಣಿಸಿಕೊಳ್ಳುವ ಸಂಭವವಿದೆ. ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಹಾಗೂ ದಾವಣಗೆರೆಯಲ್ಲಿ ಮುಂದಿನ ನಾಲ್ಕು ದಿನಗಳು ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ.
ಇದೇ 28ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ರಾಯಚೂರಿನಲ್ಲಿ ಗರಿಷ್ಠ (44.5 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ಕಲಬುರಗಿ, ರಾಯಚೂರು, ಕೊಪ್ಪಳ ಸೇರಿ 14 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.