ADVERTISEMENT

ರಾಜ್ಯದ ಹಲವೆಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2022, 2:16 IST
Last Updated 17 ಜುಲೈ 2022, 2:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರವೂ ಭಾರಿ ಮಳೆಯಾಗಲಿದೆ. ಸೋಮವಾರದಿಂದ ಕೆಲವೆಡೆ ಮಳೆ ಪ್ರಮಾಣ ಕಡಿಮೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು,ಬೀದರ್, ಕಲಬುರ್ಗಿ, ಬೆಳಗಾವಿ, ಹಾಗೂ ಹಾಸನ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉಳಿದೆಡೆ ಮಳೆ ತಗ್ಗಲಿದೆ. ಮಂಗಳವಾರದಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ. ನಿಂದ 50 ಕಿ.ಮೀ. ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದಿನ 48 ಗಂಟೆಗಳು ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.