ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರವೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕಲಬುರಗಿ, ಯಾದಗಿರಿ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಜತೆಗೆ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಇನ್ನುಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದೇ 19ರವರೆಗೂ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
22ರವರೆಗೂ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಸಿದ್ದಾಪುರ, ಕೊಪ್ಪಳ ಜಿಲ್ಲೆಯ ಬೇವೂರು ಹಾಗೂ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಗರಿಷ್ಠ (ತಲಾ 7 ಸೆಂ.ಮೀ.) ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.