ADVERTISEMENT

ಬೆಲೆ ಏರಿಕೆ ಬಿಜೆಪಿ ಮೌನವೇಕೆ: ಎಚ್‌ಡಿಕೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2022, 16:07 IST
Last Updated 3 ಏಪ್ರಿಲ್ 2022, 16:07 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ‘ಬೆಲೆ ಏರಿಕೆ ವಿಚಾರದಲ್ಲಿ ಹಿಂದಿನ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರನ್ನು ಮೌನಿ ಎಂದು ಟೀಕಿಸಿದ್ದ ಬಿಜೆಪಿಯವರು ಈಗ ನಿರಂತರ ಬೆಲೆ ಏರಿಕೆ ನಡೆಯುತ್ತಿದ್ದರೂ ಏಕೆ ಮೌನವಾಗಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ದರದಲ್ಲಿ ನಿರಂತರ ಏರಿಕೆ ಕುರಿತು ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 13 ದಿನಗಳಲ್ಲಿ ₹ 8 ರಷ್ಟು ಹೆಚ್ಚಳವಾಗಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಬಿಜೆಪಿ ಮೌನವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರವೂ ಮೌನವಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯೂ ಮೌನವಾಗಿದ್ದಾರೆ’ ಎಂದು ಟೀಕಿಸಿದ್ದಾರೆ.

‘ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ದರ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. 2018 ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲ ಮನ್ನಾದ ಹೊರೆ ಭರಿಸಲು ಪ್ರತಿ ಲೀ ಪೆಟ್ರೋಲ್‌ಗೆ ₹ 1.12 ಮತ್ತು ಡೀಸೆಲ್‌ಗೆ ₹ 11.14 ಹೆಚ್ಚಿಸಿದ್ದೆ. ಆಗ ಬಿಜೆಪಿ ನಾಯಕರು ಕೂಗಾಡಿ, ಗಲಾಟೆ ಎಬ್ಬಿಸಿದ್ದರು. ಈಗ ಬೆಲೆ ಏರಿಕೆಯ ವಿಷಯಗಳಿಂದ ಜನರನ್ನು ದಿಕ್ಕು ತಪ್ಪಿಸಲು ಹಿಜಾಬ್‌, ಕೇಸರಿ ಶಾಲು, ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ, ಹಲಾಲ್‌ ಕಟ್‌ ವಿರೋಧದಂತಹ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗಳಿಸುವ ಕನಸು ಬೆಲೆ ಏರಿಕೆಯಿಂದ ಮಣ್ಣು ಪಾಲಾಗುತ್ತದೆ ಎಂಬ ಭಯ ಬಿಜೆಪಿಯನ್ನು ಆವರಿಸಿದೆ. ಅದಕ್ಕಾಗಿ ಜನರ ಗಮನ ಬೇರೆಡೆ ಸೆಳೆಯಲು ಸೂಕ್ಷ್ಮ ವಿಚಾರಗಳತ್ತ ಸೆಳೆಯಲು ಪ್ರಯತ್ನ ಮಾಡುತ್ತಿದೆ. ಹಿಂದುತ್ವದ ವಿನಾಶಕ್ಕಾಗಿ ಹಿಂಸಾಚಾರದ ಶಂಖ ಊದಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಶ್ರೀಮಂತರಾಗುತ್ತಿದ್ದಾರೆ. ಬಡವರು ಮನೆ ನಿರ್ಮಿಸಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಹಿಂದೆ ಖಾಲಿ ಸಿಲಿಂಡರುಗಳನ್ನು ಹೊತ್ತು ಬೀದಿಯಲ್ಲಿ ಪ್ರತಿಭಟನೆ ನಡೆಸಿದವರು ಈಗ ಎಲ್ಲಿ ಹೋಗಿದ್ದಾರೆ? ಈಗಲೂ ಬೀದಿಗೆ ಬಂದು ಪ್ರತಿಭಟನೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.

‘ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದು ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಎಂಟು ವರ್ಷದ ಹಿಂದಿನ ತಪ್ಪನ್ನು ಇನ್ನೂ ಏಕೆ ಸರಿಪಡಿಸಿಲ್ಲ. ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತ ಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ಬಲ್ಲಿದ ಜನರ ಪಕ್ಷ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.