ಸಾಂದರ್ಭಿಕ ಚಿತ್ರ
ನವದೆಹಲಿ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಲೋಪವೂ ಇದೆ ಎಂದು ಕೇಂದ್ರ ಸರ್ಕಾರ ಬೊಟ್ಟು ಮಾಡಿದೆ.
ರಾಜ್ಯಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಜಗ್ಗೇಶ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅರಣ್ಯ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ‘ಈ ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣವೆಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ’ ಎಂದು ತಿಳಿಸಿದ್ದಾರೆ.
‘ಮಲೆ ಮಹದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಣಾ ವಲಯವನ್ನಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಈ ಹಿಂದೆ ಸಲಹೆ ನೀಡಿತ್ತು. ಒಂದು ವೇಳೆ, ಈ ಕೆಲಸ ಮಾಡಿದ್ದರೆ ಹುಲಿಗಳಿಗಾಗಿ ಮೇಲ್ವಿಚಾರಣಾ ವ್ಯವಸ್ಥೆಯಂತಹ ಡಿಜಿಟಲ್ ಪರಿಕರಗಳನ್ನು ಬಳಸಿ ಹುಲಿಗಳ ನೈಜ ಸಮಯದ ಮೇಲ್ವಿಚಾರಣೆ ನಡೆಸಲು ಸಾಧ್ಯವಾಗುತ್ತಿತ್ತು. ಈ ಬಗ್ಗೆ ವಿಶೇಷ ತನಿಖಾ ತಂಡವು ತನ್ನ ವರದಿಯಲ್ಲಿ ಉಲ್ಲೇಖಿಸಿದೆ’ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಎಸಗಿದ ಮೂವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.