ADVERTISEMENT

ಚುನಾವಣೆಯಲ್ಲಿ ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಎಂ.ಪಿ. ರೇಣುಕಾಚಾರ್ಯ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 17:44 IST
Last Updated 1 ಅಕ್ಟೋಬರ್ 2021, 17:44 IST
ರೇಣುಕಾಚಾರ್ಯ
ರೇಣುಕಾಚಾರ್ಯ    

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ನಾನು ಬದ್ಧ. ಬೊಮ್ಮಾಯಿ ನಾಯಕತ್ವಕ್ಕೆ ನನ್ನ ಬೆಂಬಲವಿದೆ’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ವಿಕಾಸಸೌಧದಲ್ಲಿ ಶುಕ್ರವಾರ ತಮ್ಮ ಅಧಿಕೃತ ಕಚೇರಿಯ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಹುದ್ದೆಯಲ್ಲಿರುವವರ ನೇತೃತ್ವದಲ್ಲೇ ಚುನಾವಣೆ ಎದುರಿಸುವುದು ಸಹಜ ಸಂಗತಿ. ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ. ನಮಗೆ ಗೆಲುವು ಮುಖ್ಯ’ ಎಂದರು.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿದ್ದೆ. ಪಕ್ಷದ ಸಂಪರ್ಕ ಸೇತುವೆಯಂತೆ ಕೆಲಸ ಮಾಡಿದ್ದೆ. ಈಗಲೂ ಅದೇ ಹುದ್ದೆ ನೀಡಿದ್ದಾರೆ. ನಾನು ಯಾವತ್ತೂ ಬದಲಾಗುವುದಿಲ್ಲ. ಅದೇ ರೀತಿ ಕೆಲಸ ಮಾಡುತ್ತೇನೆ’ ಎಂದರು.

ADVERTISEMENT

ಈಗ ತೃಪ್ತಿ– ಅತೃಪ್ತಿ ಕುರಿತು ಮಾತನಾಡುವುದಿಲ್ಲ. ರಾಜಕೀಯ ಕಾರ್ಯದರ್ಶಿಯ ಸ್ಥಾನ ಸಣ್ಣ ಹುದ್ದೆ. ಆದರೂ, ಈಗ ಯಾವುದೇ ಮಾತನಾಡುವುದಿಲ್ಲ. ಕೊಟ್ಟಿರುವ ಜವಾಬ್ದಾರಿ ಬಳಸಿಕೊಂಡು ಪಕ್ಷ ಸಂಘಟಿಸುವುದು ತಮ್ಮ ಗುರಿ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವರು ರೇಣುಕಾಚಾರ್ಯ ಅವರ ಕಚೇರಿಗೆ ಭೇಟಿನೀಡಿ ಶುಭ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.