ADVERTISEMENT

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 16:06 IST
Last Updated 24 ಏಪ್ರಿಲ್ 2022, 16:06 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ನಿರ್ಧಾರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ’ ಎಂದು ಪ್ರಕಟಿಸಿದ್ದರು. ಈ ಕುರಿತು ಭಾನುವಾರ ಪತ್ರ ಬರೆದಿರುವ ಯಡಿಯೂರಪ್ಪ, ‘ನಿಮ್ಮ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿರುವ ಮಹನೀಯರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿ’ ಎಂದು ಕೋರಿದ್ದಾರೆ.

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನು ಇಡುವುದಾಗಿ ಪ್ರಕಟಿಸಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರು ಇದ್ದಾರೆ. ಅವರ ಕೊಡುಗೆಗೆ ಹೋಲಿಸಿದಾಗ ನನ್ನದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿದ ಜಿಲ್ಲೆಯ ಜನರ ಸೇವೆ ಮಾಡಿದ್ದೇನೆ ಎಂಬ ಧನ್ಯತಾ ಭಾವವಿದೆ. ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ’ ಎಂದು ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.