
ಸಿಐಡಿ ( ಸಾಂಕೇತಿಕ ಚಿತ್ರ)
ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಹಲ್ಲೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.
ಮಹಿಳೆ ಮೇಲೆ ಅಮಾನುಷ ದೌರ್ಜನ್ಯ ಎಸಗಿದ್ದು ರಾಷ್ಟ್ರಮಟ್ಟದಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ. ಕರ್ನಾಟಕ ಹೈಕೋರ್ಟ್ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದ ವಿವಿಧೆಡೆ ಪ್ರತಿಭಟನೆ ಆರಂಭಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ಹಾಗೂ ಬಿಜೆಪಿಯ ಸತ್ಯ ಶೋಧನಾ ತಂಡದ ಸದಸ್ಯರು ಶನಿವಾರ ಭೇಟಿ ನೀಡಿದರು. ಭಾನುವಾರ ಕೂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದು ಪರಿಶೀಲಿಸಿದರು. ಮಾಹಿತಿ ಸಂಗ್ರಹಿಸಿ ಆಯೋಗಕ್ಕೆ ನೀಡಿದ್ದು, ಆಯೋಗವು ಡಿ.18 ಅಥವಾ 19ರಂದು ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಈ ಎಲ್ಲದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿದೆ. ಸೋಮವಾರ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ, ಯುವಕನ ತಾಯಿ ಮೇಲೆ ದೌರ್ಜನ್ಯ ಎಸಗಲಾಗಿದೆ. ವಾರದ ಹಿಂದೆ ಘಟನೆ ನಡೆದಿದ್ದು, ಪೊಲೀಸರು ಈಗಾಗಲೇ 11 ಆರೋಪಿಗಳನ್ನು ಬಂಧಿಸಿದ್ದಾರೆ.
ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ಕೂಡ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.