ADVERTISEMENT

ಮಹಿಳಾ ನೌಕರರಿಗೆ 180 ದಿನ ಶಿಶುಪಾಲನಾ ರಜೆ: ಆದೇಶ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 21:16 IST
Last Updated 22 ಜೂನ್ 2021, 21:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ 180 ದಿನಗಳು ಶಿಶು ಪಾಲನಾ ರಜೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.

ಮಹಿಳಾ ನೌಕರರು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೇ ಕಿರಿಯ ಮಗು 18 ವರ್ಷ ತುಂಬುವವರೆಗೆ ಈ ರಜೆ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಪ್ರತಿ ಬಾರಿ ರಜೆ ತೆಗೆದುಕೊಳ್ಳುವಾಗ ಕನಿಷ್ಠ 15 ದಿನಗಳಿಗೂ ಕಡಿಮೆ ಇಲ್ಲದಂತೆ ರಜೆ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಕ್ಕಳ ಆರೈಕೆ, ಪಾಲನೆ, ಪೋಷಣೆಗೆ ಶಿಶುಪಾಲನಾ ರಜೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು. 2020ರಲ್ಲಿ ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಈಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ‘ಸರ್ಕಾರದ ಈ ನಿರ್ಧಾರದಿಂದ ಶೇ 75 ರಷ್ಟು ಮಹಿಳಾ ನೌಕರರಿಗೆ ಇದರ ಪ್ರಯೋಜನ ಸಿಗಲಿದೆ. ರಾಜ್ಯ ಸರ್ಕಾರಿ ನೌಕರರ ಪರವಾಗಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.