ADVERTISEMENT

ಶ್ರಮಿಕರ ಹೋರಾಟ: ’ಕೈ’–‘ದಳ‘‌ ಬೆಂಬಲ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಚ್‌.ಡಿ. ರೇವಣ್ಣ, ಬಸವರಾಜ ಹೊರಟ್ಟಿ ಸಹಮತ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 20:07 IST
Last Updated 22 ಸೆಪ್ಟೆಂಬರ್ 2020, 20:07 IST
ಪ್ರತಿಭಟನೆ ಸ್ಥಳಕ್ಕೆ ಬಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ರೈತರ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುವ ಭರವಸೆ ನೀಡಿದರು –ಪ್ರಜಾವಾಣಿ ಚಿತ್ರ
ಪ್ರತಿಭಟನೆ ಸ್ಥಳಕ್ಕೆ ಬಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ರೈತರ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುವ ಭರವಸೆ ನೀಡಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು:ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದ್ದು, ಕಾಂಗ್ರೆಸ್, ಜೆಡಿಎಸ್ ಹಾಗೂ ವಿವಿಧ ಸಂಘ–ಸಂಸ್ಥೆಗಳು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿಮಂಗಳವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿಪಾಲ್ಗೊಂಡಿದ್ದರು.

ಸಿದ್ದರಾಮಯ್ಯ ಮಾತನಾಡಿ, ರೈತರು, ಬಡವರಿಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ದೇವರಾಜ ಅರಸು ಅವರು ‘ಉಳುವವನೆ ಹೊಲದೊಡೆಯ’ ಕಾನೂನು ಜಾರಿಗೆ ತಂದರು. ಈಗನ ರಾಜ್ಯ ಮತ್ತು ಕೇಂದ್ರ ಸರ್ಕಾರ ದುಡ್ಡಿದ್ದವರನ್ನು ಹೊಲದೊಡೆಯರನ್ನಾಗಿ ಮಾಡಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಮೈಸೂರು ಭಾಗದಲ್ಲಿ ಈ ಹಿಂದೆ ರೈತರು ಉಳ್ಳವರಿಗೆ ಭೂಮಿ ನೀಡಿದರು. ಈಗ ಅವರು ತಮ್ಮ ಜಮೀನಿಗೇ ಕೂಲಿ ಕೆಲಸಗಾರರಾಗಿ ಹೋಗುತ್ತಿದ್ದಾರೆ. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.

‘ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ಕೇಂದ್ರದಲ್ಲೀಗ ಸಂಘರ್ಷ ನಡೆಯುತ್ತಿದೆ. ರಾಜ್ಯಗಳ ಸ್ವಾಯತ್ತತೆ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ.ಸರ್ವಾಧಿಕಾರದ ಧೋರಣೆಯಿಂದ ನಮ್ಮೆಲ್ಲರ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು’ ಎಂದರು.

‘ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಸದನದಲ್ಲಿ ಹೋರಾಟ ನಡೆಸುತ್ತೇವೆ. ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕಾರ ಆಗದಂತೆ ನೋಡಿಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ, ‘ಈ ಮಸೂದೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರ ಪರವಾಗಿ ಪಕ್ಷ ಹೋರಾಟ ನಡೆಸಲಿದೆ’ ಎಂದು ಹೇಳಿದರು.

ಜೆಡಿಎಸ್ ಜತೆ ಚರ್ಚೆ: ಡಿ.ಕೆ.ಶಿವಕುಮಾರ್‌
ರೈತ ವಿರೋಧಿ ಮಸೂದೆಗಳು ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದಂತೆ ತಡೆಯಲು ಜೆಡಿಎಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲ. ಭೂಸುಧಾರಣೆ ಮಸೂದೆ ಅಲ್ಲಿ ಒಪ್ಪಿಗೆ ಸಿಗದಂತೆ ನೋಡಿಕೊಳ್ಳಲಾಗುವುದು ಎಂದರು.

‘ರೈತರ ಬಗ್ಗೆ ಕಾಳಜಿ ಇಲ್ಲದ ಕೃಷಿ ಸಚಿವರು ಈ ಹೋರಾಟ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರ ಹಿಡಿದಿರುವ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಮಾರಕವಾದ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ’ ಎಂದು ದೂರಿದರು.

ಬಂದ್‌ ಬಗ್ಗೆ ನಿರ್ಧಾರ ಇಂದು
ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಸೆ.25 ರಂದು ಕರೆ ನೀಡಿರುವ ಬಂದ್‌ಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಬಂದ್ ನಡೆಸಬೇಕೆ, ನಡೆಸಿದರೆ ಯಾವ ಸ್ವರೂಪದಲ್ಲಿ ಇರಬೇಕು ಎಂಬುದರ ಕುರಿತು ಎಲ್ಲಾ ಸಂಘಟನೆಗಳ ಜತೆ ಚರ್ಚೆ ನಡೆಸಿ ಬುಧವಾರ ತೀರ್ಮಾನ ಪ್ರಕಟಿಸಲಾಗುವುದು’ ಎಂದು ಹೇಳಿದರು.

ಕಬ್ಬುಬೆಳೆಗಾರರ ಪ್ರತಿಭಟನೆ
ಸ್ವಾತಂತ್ರ್ಯ ಉದ್ಯಾನದಲ್ಲಿ ಐಕ್ಯ ಹೋರಾಟ ನಡೆಯುತ್ತಿದ್ದರೆ, ಎದುರಿನ ರಸ್ತೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ‘ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಕೂಡಲೇ ಕಬ್ಬು ಬೆಳೆಗಾರರ ಸಭೆ ಕರೆಯಲು ಮನವಿ ಮಾಡಲಾಗುವುದು’ ಎಂದು ತಿಳಿಸಿದರು.

ಮುಂದುವರಿದ ಪ್ರತ್ಯೇಕ ಪ್ರತಿಭಟನೆ
ಮತ್ತೊಂದೆಡೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಧರಣಿ ಮುಂದುವರಿಸಿದ್ದಾರೆ.

‘ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯದೆ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

ರೈತರಒತ್ತಾಯಗಳು
*ಬಡ ಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲೀ ಒಕ್ಕಲೆಬ್ಬಿಸಬಾರದು.

*ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗೆ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.

*ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ವಿತರಣೆ ಮಾಡಬೇಕು.

* ರೈತ, ದಲಿತ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಕೂಡಲೇ ರದ್ದುಪಡಿಸಬೇಕು.

*ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.