ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎದುರು ಯತೀಂದ್ರ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿರುವ ಯತೀಂದ್ರ ಅವರಿಗೆ ವಿಚಾರಣೆಗೆ ಬರುವಂತೆ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. 'ಕಲಾಪದ ಸಂದರ್ಭದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಾಳಕರ ಅವರಿಗೆ ಅಶ್ಲೀಲ ಪದ ಬಳಸಿದ್ದು ನಿಜ. ಅದನ್ನು ನಾವುಗಳು ವಿರೋಧಿಸಿದ್ದೆವು ಎಂಬುದಾಗಿ ಹೇಳಿಕೆ ದಾಖಲಿಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.
ಲಿಖಿತ ರೂಪದಲ್ಲಿ ನೋಟಿಸ್ ನೀಡಿ, ಬುಧವಾರದ ಒಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿತ್ತು. ಸೋಮವಾರ ಸಂಜೆ 5ರ ಸುಮಾರಿಗೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಐಡಿ ಕಚೇರಿಗೆ ಬಂದಿದ್ದರು. ರಾತ್ರಿ 7 ಗಂಟೆವರೆಗೂ ತನಿಖಾಧಿಕಾರಿ ಕೇಳಿದ ಎಲ್ಲ ಪ್ರಶ್ನೆೆಗಳಿಗೆ ಉತ್ತರ ನೀಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಯತೀಂದ್ರ ಅವರ ಮೌಖಿಕ ಮತ್ತು ಲಿಖಿತ ರೂಪದಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದೆ. ಅವರು ನೀಡಿದ ಹೇಳಿಕೆಯನ್ನು ವಿಡಿಯೊ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಮಂಗಳವಾರ ಕಾರ್ಯಕ್ರಮವಿದ್ದ ಕಾರಣಕ್ಕೆ ಸೋಮವಾರವೇ ಅವರು ವಿಚಾರಣೆಗೆ ಬಂದಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.