ADVERTISEMENT

ಸರಿಯಾದ ದಾಖಲೆ ಕೊಟ್ಟರೆ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 11:54 IST
Last Updated 7 ಮಾರ್ಚ್ 2020, 11:54 IST
   

ಹಾವೇರಿ: ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಅರ್ಹತಾ ಪತ್ರಗಳ ಪರಿಶೀಲನೆ ಮಾಡಲಾಗುತ್ತಿದ್ದು, ಅರ್ಹ ರೈತರು ಸರಿಯಾದ ದಾಖಲೆ ನೀಡಿದರೆ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಾಲ ಮನ್ನಾ ಬಗ್ಗೆ ಅನುಮಾನ ಬೇಡ, ರಾಜ್ಯ ಬಜೆಟ್‌ನಲ್ಲಿ ರೈತರ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ₹ 5 ಸಾವಿರ ಕೋಟಿಯಲ್ಲಿ ನದಿ ನೀರನ್ನು ಎತ್ತಿ ಕೆರೆ ತುಂಬಿಸುವ ಏತ ನೀರಾವರಿ ಯೋಜನೆಗೆ ತೆಗೆದಿರಿಸುವ ಮೂಲಕ ಬಾಕಿ ಉಳಿದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ದೂದಿಹಳ್ಳಿ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲೆಯ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ 88 ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ಸರ್ವಜ್ಞ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರೆವೆರಿಸಿ ಅವರು ಮಾತನಾಡಿದರು.

ADVERTISEMENT

ರೈತರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಹಿರೇಕೆರೂರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯಲು ನೀರು ಒದಗಿಸುವ ನಿಟ್ಟಿನಲ್ಲಿ ಕುಮದ್ವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ಸಹಿತ ಸೇತುವೆ ಮತ್ತು ಹೀರೆಮಾದಾಪೂರ ಗ್ರಾಮದ ಹತ್ತಿರ ಬ್ಯಾರೇಜ್ ನಿರ್ಮಿಸಲು ₹ 17 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಮಳೆಯಿಂದ ಶಿಥಿಲಗೊಂಡ ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ 35 ಸರ್ಕಾರಿ ಶಾಲೆಗಳ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ₹ 4.73 ಕೋಟಿಗಳಲ್ಲಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.