ADVERTISEMENT

ಪ್ರವಾಹ ಎದುರಿಸಲು ಸಜ್ಜು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 22:58 IST
Last Updated 1 ಜೂನ್ 2021, 22:58 IST
ಬಿಎಸ್‌ವೈ
ಬಿಎಸ್‌ವೈ   

ಬೆಂಗಳೂರು: ರಾಜ್ಯದಲ್ಲಿ ಇದೇ 6 ಅಥವಾ 7ರ ವೇಳೆಗೆ ಮುಂಗಾರು ಆರಂಭವಾಗಲಿದ್ದು, 20 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಹಾಗೂ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಯ ಪೂರ್ವಸಿದ್ಧತೆ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಂಗಳವಾರ ಸಭೆ ನಡೆಸಿದರು.

‘ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಪಂಚಾಯಿತಿ ಮಟ್ಟದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಸಜ್ಜಾಗಿವೆ. ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

ADVERTISEMENT

‘ಕೃಷಿ ಚಟುವಟಿಕೆಯ ಉತ್ತೇಜನಕ್ಕೆ ಅಗತ್ಯ ಇರುವಷ್ಟು ಡಿಎಪಿ ಮತ್ತು ಯೂರಿಯಾ ರಸಗೊಬ್ಬರವನ್ನು ಸಕಾಲದಲ್ಲಿ ಪೂರೈಸುವ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಲಾಗುವುದು’ ಎಂದು ಸಭೆಗೆ ತಿಳಿಸಿದರು.

‘2020-21ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್ ಆಹಾರಧಾನ್ಯ ಉತ್ಪಾದನೆ ಆಗಿದೆ. ಕಳೆದ ವರ್ಷಕ್ಕಿಂತ (2019–20) ಶೇ 10ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಸಾಲಿನಲ್ಲಿ 135.48 ಲಕ್ಷ ಟನ್ ಗುರಿ ಹೊಂದಲಾಗಿದೆ’ ಎಂದು ಬಿ.ಸಿ. ಪಾಟೀಲ ತಿಳಿಸಿದರು.

‘690 ಕೃಷಿ ಯಂತ್ರಧಾರೆ ಕೇಂದ್ರಗಳು ಮತ್ತು 210 ಗ್ರಾಮಮಟ್ಟದ ಕೃಷಿ ಯಂತ್ರೋಪಕರಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿವೆ. ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತಿದೆ’ ಎಂದೂ ಅವರು ಹೇಳಿದರು. ರಾಜ್ಯದಲ್ಲಿ ಈವರೆಗಿನ ಮಳೆ ಪ್ರಮಾಣ, ಬಿತ್ತನೆ ಪ್ರಗತಿಯ ಬಗ್ಗೆ ಮುಖ್ಯಮಂತ್ರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಜೂ.1ರಿಂದ 5ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಜೂ.4ರವರೆಗೆ ‘ಯೆಲ್ಲೊ ಅಲರ್ಟ್‌’ ಮುಂದು
ವರಿಸಲಾಗಿದೆ. ಬೀದರ್, ಕಲಬುರ್ಗಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.2 ಮತ್ತು 3ರಂದು ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಭಾಗಗಳಲ್ಲಿ ಇದೇ 3ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ನೆರೆಯ ಕೇರಳಕ್ಕೆಬುಧವಾರ ಮತ್ತು ಗುರುವಾರ ಮುಂಗಾರಿನ ಪ್ರವೇಶವಾಗಲಿದೆ.ಈ ವಾರಾಂತ್ಯದ ವೇಳೆಗೆರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಹವಾಮಾನ ವೈಪರೀತ್ಯದಿಂದಾಗಿ ಈಗಾಗಲೇ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ ಎಂದೂ ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?: ಬೀದರ್‌ ಜಿಲ್ಲೆಯ ಹುಮನಾಬಾದ್‌ನಲ್ಲಿ ಮಂಗಳವಾರ 11 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಧರ್ಮಸ್ಥಳ 5, ಮಂಗಳೂರು 4, ಹೊನ್ನಾವರ 3, ಬೆಳ್ತಂಗಡಿ, ಶಿಡ್ಲಘಟ್ಟ 2, ಚಿಕ್ಕೋಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.