ADVERTISEMENT

391 ತಬ್ಲಿಗಿ ಜಮಾತ್ ಕಾರ್ಯಕರ್ತರ ಕ್ವಾರಂಟೈನ್: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 10:45 IST
Last Updated 2 ಏಪ್ರಿಲ್ 2020, 10:45 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ರಾಜ್ಯದ 391 ತಬ್ಲಿಗಿಜಮಾತ್ ಕಾರ್ಯಕರ್ತರನ್ನು ಗುರುತಿಸಿ, ಕ್ವಾರಂಟೈನ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಬುಧವಾರ ಕರೆದಿದ್ದ ಎಲ್ಲ ಮುಖ್ಯಮಂತ್ರಿಗಳ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಯಡಿಯರಪ್ಪ, ಕಾನ್ಫರೆನ್ಸ್ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು.

ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡ 391 ಜನರನ್ನು ಈಗಾಗಲೇ ಗುರುತಿಸಿ ಹೋಮ್ ಕ್ವಾರಂಟೈನ್ ಅಥವಾಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಇನ್ನುಳಿದವರನ್ನೂ ಪತ್ತೆ ಮಾಡಲಾಗುತ್ತಿದೆ. ಇವರು ಧರ್ಮಪ್ರಚಾರ ಮತ್ತು ಇತರ ಚಟುವಟಿಕೆಗಳಿಗಾಗಿ ವಿವಿಧ ಜಿಲ್ಲೆಗಳಿಗೆ ತೆರಳಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಲ್ಲಿಯೇ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಇವರು ಎಲ್ಲಿದ್ದಾರೆಯೋ ಅಲ್ಲಿಯೇ ಕ್ವಾರಂಟೈನ್ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ವ್ಯಾಪಕ ವಿಚಾರಣೆ ಮತ್ತು ತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಬ್ಲೀಗಿ ಜಮಾತ್‌ನಲ್ಲಿ ಪಾಲ್ಗೊಂಡವರನ್ನುಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಬೀದರ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ 91 ಜನರಲ್ಲಿ 11 ಜನರಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ. ಅವರಿಗೆ ಸೋಂಕು ತಗುಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್-19 ಹರಡುವುದನ್ನುಸಮರ್ಥವಾಗಿ ನಿಯಂತ್ರಿಸಲು ಎಲ್ಲ ಧರ್ಮಗುರುಗಳು ಸಹಕರಿಸಬೇಕು. ತಮ್ಮ ಸಮುದಾಯದ ಜನರಲ್ಲಿ ಅರಿವು ಮೂಡಿಸಿ, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.