
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಬಾಕಿ ಇರುವ ಸಾಕ್ಷಿಗಳ ಬಗ್ಗೆ ಮೆಮೊ ಸಲ್ಲಿಸಿ’ ಎಂದು ಹೈಕೋರ್ಟ್, ಸಿಬಿಐಗೆ ನಿರ್ದೇಶಿಸಿದೆ.
ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್, ‘ಸಾಕ್ಷಿಯೊಬ್ಬರು ವಿನಯ್ ಕುಲಕರ್ಣಿ ಕಾಲಿಗೆ ಬಿದ್ದರೆಂಬ ಆರೋಪವಿದೆ. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿಲ್ಲ. ತನಿಖಾಧಿಕಾರಿಯೊಬ್ಬರನ್ನು ಬಿಟ್ಟು ಉಳಿದೆಲ್ಲ ಸಾಕ್ಷಿಗಳ ವಿಚಾರಣೆ ಮುಕ್ತಾಯಗೊಂಡಿದೆ. ರಾಜಕೀಯ ದುರುದ್ದೇಶದಿಂದ ಈ ಕೊಲೆ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ, ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.
ಇದಕ್ಕೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ‘ಪ್ರಕರಣದಲ್ಲಿ ಇನ್ನೂ ಹೆಚ್ಚುವರಿ ಸಾಕ್ಷಿಗಳ ವಿಚಾರಣೆ ಬಾಕಿಯಿದೆ. ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಯುವ ತನಕ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬಾರದು. ಈಗಾಗಲೇ ಸುಪ್ರೀಂ ಕೋರ್ಟ್ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಿರುವುದನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಬೇಕು ’ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಬಾಕಿಯಿರುವ ಸಾಕ್ಷಿಗಳ ಬಗ್ಗೆ ವಿವರವಾದ ಮೆಮೊ ಸಲ್ಲಿಸಿ’ ಎಂದು ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ (ಜ.8) ಮುಂದೂಡಿತು. ವಿನಯ ಕುಲಕರ್ಣಿ ಪರ ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ವಕಾಲತ್ತು ವಹಿಸಿದ್ದಾರೆ.
ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ ಕುಲಕರ್ಣಿ ಅವರು 2025ರ ಜೂನ್ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 2025ರ ಡಿಸೆಂಬರ್ 8ರಂದು ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.