ADVERTISEMENT

ಪ್ರಮಾಣ ವಚನಕ್ಕೆ ಬರಲು ಸಚಿವೆ ಶಶಿಕಲಾಗೆ ಝೀರೋ ಟ್ರಾಫಿಕ್‌: ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 2:01 IST
Last Updated 19 ಆಗಸ್ಟ್ 2021, 2:01 IST
ಶಶಿಕಲಾ ಜೊಲ್ಲೆ ಅವರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು
ಶಶಿಕಲಾ ಜೊಲ್ಲೆ ಅವರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು    

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ನಗರದ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‌ಆ.4ರಂದು ಮಧ್ಯಾಹ್ನ 2.14ರಿಂದ 2.40ರವರೆಗೆ 34 ಕಿಲೋ ಮೀಟರ್‌ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದ ಸಾಮಾನ್ಯ ಜನ ತೊಂದರೆ ಅನುಭವಿಸಿದರು. ಶಿಷ್ಟಾಚಾರದ ಪ್ರಕಾರ ರಾಜ್ಯಪಾಲರು, ಮುಖ್ಯಮಂತ್ರಿ, ಗೃಹ ಸಚಿವ, ಮುಖ್ಯ ನ್ಯಾಯಮೂರ್ತಿ ಮತ್ತು ಡಿಜಿಪಿ ಅನುಮತಿ ಮೇರೆಗೆ ಅಗತ್ಯವಿದ್ದಲ್ಲಿ ಮಾತ್ರ ಇತರರಿಗೆ ಈ ಸೌಲಭ್ಯ ಕಲ್ಪಿಸಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ.

ADVERTISEMENT

ಶಶಿಕಲಾ ಜೊಲ್ಲೆಯವರು ಆ.4ರಂದು ಕೇವಲ ಶಾಸಕರಾಗಿದ್ದರು. ಝೀರೋ ಟ್ರಾಫಿಕ್ ಸೌಲಭ್ಯ ಪಡೆಯಲು ಅವರು ಅರ್ಹರಾಗಿರಲಿಲ್ಲ ಎಂದು ಹೇಳಿದ್ದಾರೆ.

ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮೊದಲು ಈ ಸಂಬಂಧ ಯಾರಿಗೂ ದೂರು ನೀಡಿಲ್ಲ ಎಂದು ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಹಲವು ವಿಷಯಗಳನ್ನು ಈ ಅರ್ಜಿ ಹೊಂದಿದೆ ಎಂಬುದನ್ನು ಗಮನಿಸಿದ ಪೀಠ, ಇದೇ ಅರ್ಜಿಯನ್ನೇ ದೂರು ಎಂದು ಪರಿಗಣಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು. ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.