ADVERTISEMENT

ಆಹಾರ ಬೆಲೆ ಹೆಚ್ಚಳ: ಪವಾರ್ ಆತಂಕ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಬ್ಯಾಂಕಾಕ್ (ಪಿಟಿಐ): ಕಳೆದ ಒಂದು ವರ್ಷದಲ್ಲಿ ಭಾರತ 80 ಲಕ್ಷ ಟನ್ ಅಕ್ಕಿಯನ್ನು ರಫ್ತು ಮಾಡಿದ್ದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆಹಾರಧಾನ್ಯಗಳು ಕೈಗೆಟಕುವ ಬೆಲೆಯಲ್ಲಿ ಸಾಮಾನ್ಯ ಜನರಿಗೆ ದೊರಕಲು ಅನುಕೂಲವಾಗಿದೆ ಎಂದು ಕೃಷಿ ಸಚಿವ ಶರದ್ ಪವಾರ್ ಅವರು ತಿಳಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಹಾರಧಾನ್ಯಗಳ ಬೆಲೆ ಏರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಚಿವರು, ಅಭಿವೃದ್ಧಿಶೀಲ ರಾಷ್ಟ್ರಗಳ ಬಡವರಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಸಾರ್ಕ್ ಸದಸ್ಯ ರಾಷ್ಟ್ರಗಳ ಅಗತ್ಯ ಪೂರೈಕೆಗಾಗಿ ಸಾರ್ಕ್ ಆಹಾರ ಬ್ಯಾಂಕ್‌ನ್ನು ಆರಂಭಿಸಲಾಗಿದ್ದು, ಜಾಗತಿಕ ಆಹಾರ ಬಿಕ್ಕಟ್ಟಿನ ಸಂದರ್ಭದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ನೆರವಾಗಲು ಪ್ರಾದೇಶಿಕ ಮಟ್ಟದಲ್ಲಿ ಇಂತಹ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಪವಾರ್ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಏಷ್ಯಾ ಪೆಸಿಫಿಕ್ ವಲಯದಲ್ಲಿ ಆಹಾರಧಾನ್ಯಗಳ ಬೆಲೆ ಭಾರಿ ಹೆಚ್ಚಳವಾಗಿರುವುದರಿಂದ ಉಂಟಾಗಿರುವ ಬಿಕ್ಕಟ್ಟನ್ನು ಚರ್ಚಿಸಲು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆಯು ಏರ್ಪಡಿಸಿದ್ದ ಸಮ್ಮೇಳನದಲ್ಲಿ ಪವಾರ್ ಮಾತನಾಡುತ್ತ, ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ತಡೆಯಲು ಭಾರತದ ಕೊಡುಗೆ ಏನು ಎಂಬುದನ್ನು ವಿವರಿಸಿದ್ದಾರೆ.

2006-07ರಿಂದಲೇ ಸಾಕಷ್ಟು ಪ್ರಮಾಣದಲ್ಲಿ ಗೋಧಿಯನ್ನು ರಫ್ತು ಮಾಡಲಾಗಿದೆ. ನಂತರ 2011ರಲ್ಲಿ ಬಾಸಮತಿಯೇತರ ಅಕ್ಕಿ ಮತ್ತು ಗೋಧಿ ಮೇಲಿನ ರಫ್ತು ನಿಷೇಧವನ್ನು ತೆಗೆದು ಹಾಕಲಾಗಿದೆ ಎಂದು ಪವಾರ್ ತಿಳಿಸಿದ್ದಾರೆ.

ಕೆಲವು ಸಂದರ್ಭದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಹಾರಧಾನ್ಯ ಉತ್ಪಾದನೆಯಾಗದಿದ್ದರೂ ನಾವು ರಫ್ತಿನ ಮೇಲೆ ನಿಷೇಧ ಹೇರಿಲ್ಲ ಎಂದು ಹೇಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.