ಇಸ್ಲಾಮಾಬಾದ್ (ಪಿಟಿಐ): ತಮ್ಮ ಮೇಲಿರುವ ದೇಶದ್ರೋಹ ಆರೋಪದ ಪ್ರಕರಣವನ್ನು ಮಿಲಿಟರಿ ಕೋರ್ಟ್‌ಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಇಸ್ಲಾಮಾಬಾದ್ ಹೈಕೋರ್ಟಿನ ಮೊರೆ ಹೋಗಿದ್ದಾರೆ.
ಪಾಕಿಸ್ತಾನದಲ್ಲಿ 2007ರಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದನ್ನು ಪ್ರಶ್ನಿಸಿ ಮುಷರಫ್ ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಮಿಲಿಟರಿ ಕೋರ್ಟ್‌ಗೆ ವರ್ಗಾಯಿಸಬೇಕೆಂದು ಮುಷರಫ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಫೆ. 21ರಂದು ತ್ರಿಸದಸ್ಯ ಪೀಠ ಹೊಂದಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಫೈಸಲ್ ಅರಬ್ ಅವರು ವಜಾಗೊಳಿಸಿದ್ದರು.
ಅರ್ಜಿ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್ ಮೊರೆ ಹೊಕ್ಕಿರುವ ಮುಷರಫ್, ‘ನನ್ನ ವಿರುದ್ಧ ಪ್ರಕರಣ ದಾಖಲಾದ ಸಮಯದಲ್ಲಿ ನಾನಿನ್ನೂ ಪಾಕಿಸ್ತಾನದ ಸೇನೆಯ ಅಧಿಕಾರದಲ್ಲಿದ್ದೆ. 1952ರ ಸೇನಾ ಕಾಯ್ದೆಯ ಪ್ರಕಾರ ಇದು ನಾಗರಿಕ ಅಪರಾಧದ ವ್ಯಾಪ್ತಿಯಲ್ಲಿ ಬರುತ್ತದೆ’ ಎಂದು ಹೇಳಿದ್ದಾರೆ. ಮುಷರಫ್ ಅವರ ಅರ್ಜಿಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.